ಹೊಸದಿಗಂತ ಡಿಜಿಟಲ್ ಡೆಸ್ಕ್:
ವನಪರ್ತಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೊತ್ತಕೋಟ ಮಂಡಲದ ರಾಷ್ಟ್ರೀಯ ಹೆದ್ದಾರಿಯ ಮುಮ್ಮಲ್ಲಪಲ್ಲಿಯಲ್ಲಿ ಭಾನುವಾರ ರಾತ್ರಿ ಕಬ್ಬು ತುಂಬುತ್ತಿದ್ದ ಟ್ರ್ಯಾಕ್ಟರ್‌ಗೆ ಗರುಡ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಅವರಲ್ಲಿ ಕೆಲವರ ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ವೇಗವಾಗಿ ಬಂದ ಮಿಯಾಪುರ ಡಿಪೋ ಗರುಡ ಬಸ್ ಡಿಕ್ಕಿ ಹೊಡೆದಿದೆ. ಬಸ್ ಹೈದರಾಬಾದ್‌ನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಮೃತರಲ್ಲಿ ಚಾಲಕ, ಕ್ಲೀನರ್ ಹಾಗೂ ಓರ್ವ ಪ್ರಯಾಣಿಕ ಸೇರಿದ್ದಾರೆ.
ಅಪಘಾತದ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕ್ರಮ ಕೈಗೊಂಡಿದ್ದಾರೆ. ಗಾಯಾಳುಗಳನ್ನು ಆಂಬ್ಯುಲೆನ್ಸ್ ಸಹಾಯದಿಂದ ವನಪರ್ತಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ರಸ್ತೆ ಅಪಘಾತದಿಂದಾಗಿ ಸುಮಾರು ನಾಲ್ಕು ಕಿಲೋಮೀಟರ್‌ವರೆಗೆ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು ಅಪಘಾತಕ್ಕೀಡಾದ ವಾಹನಗಳನ್ನು ತೆಗೆದು ಟ್ರಾಫಿಕ್ ಕ್ಲಿಯರ್ ಮಾಡಿದರು.