ಹೊಸದಿಗಂತ ಡಿಜಿಟಲ್ ಡೆಸ್ಕ್;
ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಇಂದು ಮಿನಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರು ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಮಿನಿ ಲಾರಿಯಲ್ಲಿದ್ದವರು ಊಟ ಮುಗಿಸಿ ಸೇವಾಲ ಗ್ರಾಮಕ್ಕೆ ಹಿಂತಿರುಗುತ್ತಿದ್ದರು.
ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಪುನ್ ಅಗರ್ವಾಲ್ ಅವರು,’ಆಗ್ರಾ-ಅಲಿಘರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಅನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸುವಾಗ ಬಸ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ’ ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದ ಬಗ್ಗೆ ತಿಳಿದು ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಾಹಿತಿಯ ಪ್ರಕಾರ, ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮಾಹಿತಿ ಪಡೆದ ಕೂಡಲೇ ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ತಲುಪಿದರು. ಮೃತರನ್ನು ಮತ್ತು ಅಪಘಾತಕ್ಕೆ ಕಾರಣರಾದವರನ್ನು ಗುರುತಿಸುತ್ತಿದ್ದೇವೆ ಎಂದು ಹತ್ರಾಸ್ ಎಸ್ಪಿ ನಿಪುನ್ ಅಗರ್ವಾಲ್ ಹೇಳಿದ್ದಾರೆ.
ಪ್ರಾಣ ಕಳೆದುಕೊಂಡವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದು, ಈ ಘಟನೆಗೆ ಕಾರಣರಾದವರನ್ನು ಬಿಡುವುದಿಲ್ಲ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ನಾಲ್ವರು ಮಕ್ಕಳೂ ಸೇರಿದ್ದಾರೆ ಎಂದಿದ್ದಾರೆ.