ಹೊಸದಿಗಂತ ಡಿಜಿಟಲ್ ಡೆಸ್ಕ್:
ಮರಾಠಿ ಭಾಷೆಯಲ್ಲಿ ಮಾತನಾಡಲು ಬಾರದ ಕಾರಣ ಕನ್ನಡದಲ್ಲಿ ಮಾತನಾಡಲು ಹೇಳಿದ ಏನ್ ಡಬ್ಲ್ಯೂ ಕೆ ಆರ್ ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಗ್ರಾಮದಲ್ಲಿ ನಡೆದಿದೆ.
ಕಂಡಕ್ಟರ್ ಮಹಾದೇವ ಹುಕ್ಕೇರಿ ಮತ್ತು ಚಾಲಕ ಖತಲ್ ಮೋಮಿನ್ ಮೇಲೆ ಹಲ್ಲೆ ನಡೆದಿದೆ. ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಓರ್ವ ಯುವಕ ಮತ್ತು ಯುವತಿ ಸೆಮಿ-ಅರ್ಬನ್ ಸಿಬಿಟಿ-ಸುಲೇಭಾವಿ ಬಸ್ ಹತ್ತಿದ್ದು, ತಮ್ಮೊಂದಿಗೆ ಮರಾಠಿಯಲ್ಲಿ ಕಂಡಕ್ಟರ್ಗೆ ಮಾತನಾಡಲು ಸಾಧ್ಯವಾಗದ ಕಾರಣ ಬಾಳೇಕುಂದ್ರಿಯಲ್ಲಿ ತಮ್ಮ ಸಹಚರರನ್ನು ಕರೆಸಿ ಅವರ ಮೇಲೆ ಹಲ್ಲೆ ನಡೆಸಿದ್ದರು.
ಈ ಕುರಿತು ಮಾರಿಹಾಳ ಪೊಲೀಸರು ಪ್ರಕರಣ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದ್ದಾರೆ. ಶುಕ್ರವಾರ ತಡರಾತ್ರಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇತರರಿಗಾಗಿ ಹುಡುಕಾಟ ನಡೆಯುತ್ತಿದೆ.