ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಅಲ್ಮೋರಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಭಿಕಿಯಾಸೈನ್ ಸಮೀಪ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ಮಾಹಿತಿ ದೊರಕುತ್ತಿದ್ದಂತೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ತಂಡಗಳನ್ನು ತಕ್ಷಣವೇ ಸ್ಥಳಕ್ಕೆ ರವಾನಿಸಲಾಯಿತು. ಕಂದಕಕ್ಕೆ ಬಿದ್ದಿದ್ದ ಬಸ್‌ನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸಲಾಗಿದೆ.
ಗಾಯಗೊಂಡ ಪ್ರಯಾಣಿಕರನ್ನು ಭಿಕಿಯಾಸೈನ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ; ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.
ಈ ದುರ್ಘಟನೆಗೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಒದಗಿಸುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

