ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಳವಾದ ಕಂದಕಕ್ಕೆ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ತಮಿಳುನಾಡಿನ ತೆಂಕಶಿ ಜಿಲ್ಲೆಯಲ್ಲಿ ನಡೆದಿದೆ.
ಶನಿವಾರ ಸಂಜೆ ಊಟಿಯಿಂದ ತೆಂಕಶಿ ಕಡೆಗೆ 59 ಜನರಿದ್ದ ಪ್ರವಾಸಿ ಬಸ್ ತೆರಳುತ್ತಿತ್ತು. ಈ ವೇಳೆ ಕೂನೂರಿನಿಂದ ಮೆಟ್ಟುಪಾಳ್ಯಂ ರಸ್ತೆಗೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿ 50 ಅಡಿ ಆಳದ ಕಮರಿಗೆ ಉರುಳಿಬಿದ್ದಿದೆ. ಇದರಿಂದ ಅದರಲ್ಲಿದ್ದ ಪ್ರವಾಸಿಗರು ತೀವ್ರವಾಗಿ ಗಾಯಗೊಂಡಿದ್ದಾರೆ.
ವಿಷಯ ತಿಳಿದ ಕೂಡಲೇ ಪೊಲೀಸರು, ರಕ್ಷಣಾ ಪಡೆಗಳು, ಹೆದ್ದಾರಿ ಇಲಾಖೆ ಗಸ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ರಕ್ಷಿಸಲ್ಪಟ್ಟ ಪ್ರಯಾಣಿಕರಲ್ಲಿ ಎಂಟು ಮಂದಿ ಆಸ್ಪತ್ರೆಗೆ ಸಾಗಿಸಿದ ಬಳಿಕ ಕೊನೆಯುಸಿರೆಳೆದಿದ್ದಾರೆ.
ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.