November 4, 2026
Wednesday, November 4, 2026
spot_img

ಬಸ್ ಪ್ರಯಾಣ ದರ ಹೆಚ್ಚಳ: ಕಾಂಗ್ರೆಸ್ ಸರ್ಕಾರದಿಂದ ಜನಸಾಮಾನ್ಯರಿಗೆ ಮತ್ತೊಂದು ಹೊರೆ; ರೂಪಾಲಿ ಎಸ್. ನಾಯ್ಕ ಖಂಡನೆ

ಹೊಸದಿಗಂತ ವರದಿ ಕಾರವಾರ:

ರಾಜ್ಯದ ಕಾಂಗ್ರೆಸ್ ಸರ್ಕಾರ ಸಾರಿಗೆ ಬಸ್‌ಗಳ ಪ್ರಯಾಣ ದರ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಮತ್ತೊಂದು ಆರ್ಥಿಕ ಹೊರೆ ಹೊರಿಸಿದ್ದು ಖಂಡನೀಯ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರಿಗೆ ಬೆಲೆ ಏರಿಕೆಯ ಬರೆ ನಿರಂತರವಾಗಿ ಬೀಳುತ್ತಿದೆ. ಹಾಲಿನ ದರ ಹೆಚ್ಚಳ, ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಒಂದರ ಹಿಂದೆ ಒಂದರಂತೆ ಜನರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಇದೀಗ ಸಾರಿಗೆ ಬಸ್‌ಗಳ ಪ್ರಯಾಣ ದರವನ್ನೂ ಹೆಚ್ಚಿಸುವ ಮೂಲಕ ಸಾಮಾನ್ಯ ಜನರ ಬದುಕನ್ನು ಮತ್ತಷ್ಟು ದುಸ್ತರಗೊಳಿಸಲು ಹೊರಟಿರುವುದು ಸರಿಯಲ್ಲ ಎಂದು ಅವರು ಟೀಕಿಸಿದ್ದಾರೆ.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ನೀಡಿದ್ದೇವೆ ಎಂದು ಸರ್ಕಾರ ಬೆನ್ನು ತಟ್ಟಿಕೊಳ್ಳುತ್ತಿದೆ. ಆದರೆ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡಿ, ಉಳಿದ ಪ್ರಯಾಣಿಕರ ಮೇಲೆ ದುಪ್ಪಟ್ಟು ದರದ ಹೊರೆ ಹಾಕಿದರೆ ಗ್ಯಾರಂಟಿಯ ಪ್ರಯೊಜನ ಏನು. ಮಹಿಳೆಯರಿಗೆ ಉಚಿತ ಪ್ರಯಾಣದ ಹೆಸರಿನಲ್ಲಿ ಪುರುಷರು, ವಿದ್ಯಾರ್ಥಿಗಳು, ಕಾರ್ಮಿಕರು, ಉದ್ಯೋಗಿಗಳು ಹಾಗೂ ನಿತ್ಯ ಪ್ರಯಾಣಿಸುವ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳ ವೆಚ್ಚದ ನೆಪದಲ್ಲಿ ಜನರ ಮೇಲೆ ತೆರಿಗೆ ಹಾಗೂ ಬೆಲೆ ಏರಿಕೆಯ ಹೊರೆ ಹಾಕುವುದು ಸರಿಯಲ್ಲ. ಒಂದು ಕೈಯಲ್ಲಿ ಉಚಿತ ಸೌಲಭ್ಯ ನೀಡಿದಂತೆ ತೋರಿಸಿ, ಇನ್ನೊಂದು ಕೈಯಲ್ಲಿ ಜನರಿಂದಲೇ ಹೆಚ್ಚಿನ ಹಣ ವಸೂಲಿ ಮಾಡುವುದು ಜನಪರ ಆಡಳಿತದ ಲಕ್ಷಣವಲ್ಲ. ನಿತ್ಯ ಬಸ್‌ಗಳನ್ನೇ ಅವಲಂಬಿಸಿರುವ ಬಡವರು, ಮಧ್ಯಮ ವರ್ಗದವರು ಮತ್ತು ಗ್ರಾಮೀಣ ಭಾಗದ ಜನರಿಗೆ ಈ ದರ ಏರಿಕೆ ದೊಡ್ಡ ಹೊಡೆತ ನೀಡಲಿದೆ.

ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ಸಾರಿಗೆ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತಾಗಿದೆ. ಜನರ ಬದುಕಿನ ವೆಚ್ಚ ಕಡಿಮೆ ಮಾಡುವ ಬದಲು, ಪ್ರತಿಯೊಂದು ಕ್ಷೇತ್ರದಲ್ಲೂ ದರ ಹೆಚ್ಚಿಸುತ್ತಿರುವ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಹಿತವನ್ನು ಮರೆತಿದೆ.

ಇದನ್ನೂ ಓದಿ:

ರಾಜ್ಯ ಸರ್ಕಾರ ಕೂಡಲೇ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳದ ನಿರ್ಧಾರವನ್ನು ಕೈಬಿಡಬೇಕು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರ ಮೇಲೆ ಹೆಚ್ಚುವರಿ ಹೊರೆ ಹಾಕುವುದನ್ನು ನಿಲ್ಲಿಸಬೇಕು. ಜನರ ಜೇಬಿಗೆ ಕತ್ತರಿ ಹಾಕುವ ಆಡಳಿತಕ್ಕೆ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ರೂಪಾಲಿ ಎಸ್. ನಾಯ್ಕ ಎಚ್ಚರಿಸಿದ್ದಾರೆ.

Must Read

Skip to toolbar