ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಅಲ್ಲೂರು ಪ್ರದೇಶದಲ್ಲಿ ಬೆಳಗಿನ ಜಾವ ಸಂಭವಿಸಿದ ರಸ್ತೆ ದುರಂತ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಪ್ರಯಾಣಿಕನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ದಟ್ಟ ಕಂದಕಕ್ಕೆ ಉರುಳಿದ ಪರಿಣಾಮ ಒಂಬತ್ತು ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದ ತೀವ್ರತೆಯಿಂದ ಬಸ್ ಸಂಪೂರ್ಣ ಧ್ವಂಸಗೊಂಡಿದ್ದು, ಮೃತದೇಹಗಳು ಎಲ್ಲೆಡೆ ಚೆಲ್ಲಾಪಿಲ್ಲಿಯಾಗಿ ಬಿದ್ದ ದೃಶ್ಯಗಳು ಹೃದಯ ಕಲುಕುವಂತಿದ್ದವು.
ಬೆಳಗಿನ ಜಾವ 5.30ರ ವೇಳೆಗೆ ತುಳಸಿಪಕಲು ಗ್ರಾಮದ ಸಮೀಪ ಘಟನೆ ನಡೆದಿದೆ. ಬಸ್ಸಿನಲ್ಲಿ ಒಟ್ಟು 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ 12ಕ್ಕೂ ಹೆಚ್ಚು ಮಂದಿಯನ್ನು ತಕ್ಷಣ ಚಿಂತೂರು ಸಿಎಚ್‌ಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಕೆಲವರನ್ನು ನಂತರ ಭದ್ರಾಚಲಂ ಆಸ್ಪತ್ರೆಗೆ ರವಾನಿಸಲಾಗಿದೆ.
ತೀಕ್ಷ್ಣ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ ಆಳವಾದ ಇಳಿಜಾರಿನೊಳಗೆ ಉರುಳಿದಿದೆ ಎಂದು ಪ್ರಾಥಮಿಕ ಮಾಹಿತಿ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ತುರ್ತು ಕಾರ್ಯಾಚರಣೆ ಕೈಗೊಂಡಿದ್ದು, ಅವಶೇಷಗಳ ನಡುವೆ ಸಿಲುಕಿದವರನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ.
ಘಟನೆ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ತಕ್ಷಣ ಮತ್ತು ಸಮರ್ಪಕ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಪಘಾತದ ನಿಖರ ಕಾರಣ ಮತ್ತು ಮೃತರ ಗುರುತುಗಳನ್ನು ತಿಳಿದುಕೊಳ್ಳುವ ಕಾರ್ಯ ಮುಂದುವರಿದಿದೆ.

