ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸುವ ಉದ್ಯಮಿಗಳಿಗೆ 24 ಗಂಟೆಯೊಳಗೆ ಅಗತ್ಯ ‌ಸೌಲಭ್ಯ: ಸಚಿವ ನಿರಾಣಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬೆಂಗಳೂರು: ರಾಜ್ಯದ ಯಾವುದೇ ಭಾಗಗಳಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಮುಂದೆ ಬರುವ ಉದ್ಯಮಿಗಳಿಗೆ ಸಕಾಲದಲ್ಲಿ ಎಲ್ಲಾ ರೀತಿಯ ನೆರವು ನೀಡಲು ಸರ್ಕಾರ ಬದ್ಧವಾಗಿದೆ. ಅಂತಹ ಉದ್ಯಮಿಗಳಿಗೆ ಕೇವಲ 24 ಗಂಟೆಯೊಳಗೆ ಜಮೀನು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡಲಾಗುವುದು ಎಂದು ಮಧ್ಯಮ ಮತ್ತು ಬೃಹತ್‌ ಕೈಗಾರಿಕಾ ಮುರುಗೇಶ್ ನಿರಾಣಿ ಶುಕ್ರವಾರ ವಿಧಾನಸಭೆಯಲ್ಲಿ ತಿಳಿಸಿದರು.
ಶಾಸಕ ಯಶವಂತರಾಯವಿಠಲಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ನಿರಾಣಿ, ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲು ಸರ್ಕಾರ ಯೋಜನೆ ರೂಪಿಸಿದೆ. ಸಮಗ್ರ ಕೈಗಾರಿಕೆ ಅಭಿವೃದ್ದಿಗಾಗಿ ಪ್ರತಿ ಜಿಲ್ಲೆಯಲ್ಲೂ ಒಂದು ಸಾವಿರ ಎಕರೆ ಹಾಗೂ ತಾಲೂಕು ಮಟ್ಟದಲ್ಲಿ 100 ಎಕರೆ ಜಮೀನುಗಳನ್ನು ಕೈಗಾರಿಕೆಗಳಿಗಾಗಿಯೇ ಮೀಸಲಿಡಲು ತೀರ್ಮಾನಿಸಿದ್ದೇವೆ. ರಾಜ್ಯದಲ್ಲಿ ಹೂಡಿಕೆ ಮತ್ತು ಕೈಗಾರಿಕೆ ಸ್ಥಾಪನೆಗೆ ಮುಂದಾಗುವವರಿಗೆ ಎಲ್ಲ ರೀತಿಯ ಸೌಕರ್ಯವನ್ನು ಕಲ್ಪಿಸಿಕೊಡಲು ಸರ್ಕಾರ ಸಿದ್ಧ ಎಂದು ಹೇಳಿದರು.
ಕೈಗಾರಿಕಾ ವಲಯ ಸ್ಥಾಪನೆಗೆ ಅಧಿಸೂಚನೆ:
ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಕೆಐಎಡಿಬಿ ವತಿಯಿಂದ ಕೈಗಾರಿಕಾ ವಲಯ ಸ್ಥಾಪನೆ ಮಾಡಲು 3 ಸಾವಿರ ಎಕರೆ ಜಮೀನನ್ನು ಗುರುತಿಸಿದ್ದೇವೆ. ನಾನೇ ಸ್ವತಃ ಅಧಿಕಾರಿಗಳ ಜೊತೆ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ಮಾಡಿದ್ದೇನೆ. ಇಲ್ಲಿ ಕೈಗಾರಿಕಾ ವಲಯ ಅಗತ್ಯವಿರುವುದು ಗಮನಕ್ಕೆ ಬಂದಿದೆ. ವಲಯ ಸ್ಥಾಪನೆಗೆ ವಾರದೊಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ಶಾಸಕ ಮಂಜುನಾಥ್ ಅವರು ಎತ್ತಿದ ಪ್ರಶ್ನೆಗೆ ಉತ್ತರಿಸಿದರು.
ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ
ಡಾ.ಸರೋಜಿನಿ ಮಹಿಷಿ ವರದಿಯಂತೆ ರಾಜ್ಯದಲ್ಲಿ ಪ್ರಾರಂಭವಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ.70ರಷ್ಟು ಉದ್ಯೋಗ ಕೊಡಬೇಕೆಂಬ ನಿಯಮಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಸದನದಲ್ಲಿ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಶಾಸಕಿ ರೂಪಾಲಿ ಸಂತೋಷ್ ನಾಯಕ್ ಪರವಾಗಿ ಸಿದ್ದು ಸವದಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಯಾವುದೇ ಭಾಗದಲ್ಲೂ ಹೊಸದಾಗಿ ಕೈಗಾರಿಕೆ ಸ್ಥಾಪನೆ ಮಾಡಿದರೆ ಕನ್ನಡಿಗರಿಗೆ ಶೇ.70ರಷ್ಟು ಉದ್ಯೋಗಗಳನ್ನು ನೀಡಲೇಬೇಕು. ಇದು ನಮ್ಮ ಸರ್ಕಾರದ ಬದ್ದತೆ. ವಿಶೇಷವಾಗಿ ಯುವಕರಿಗೆ ಹೆಚ್ಚಿನ ಪ್ರೋತ್ಸಾಹ, ಆದ್ಯತೆ ನೀಡಲಿದ್ದೇವೆ ಎಂದು ಹೇಳಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!