ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿರುವ ನಡುವೆಯೇ ಆಹಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಮಹತ್ವದ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮುಂದಿನ 15 ದಿನಗಳೊಳಗೆ ಸಂಪುಟ ವಿಸ್ತರಣೆ ಕುರಿತು ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ. ದೇವನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತ ಅಂತಿಮ ತೀರ್ಮಾನ ಹೈಕಮಾಂಡ್ ಮಟ್ಟದಲ್ಲಿ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಇದೆ ಸಂದರ್ಭ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಕೂಡಾ ಅವರು ಸ್ಪಷ್ಟಪಡಿಸಿದ್ದಾರೆ.
ಸಚಿವರ ಈ ಹೇಳಿಕೆಯಿಂದ ರಾಜ್ಯ ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ. ಬಹುಕಾಲದಿಂದ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ನಿರೀಕ್ಷೆಯಲ್ಲಿದ್ದು, ಸಂಪುಟ ವಿಸ್ತರಣೆ ಯಾವಾಗ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ನಿರಂತರ ಚರ್ಚೆಯಾಗುತ್ತಿದೆ.
ಈ ವೇಳೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಮುನಿಯಪ್ಪ, ಸರ್ಕಾರ ಜನರಿಗೆ ಮತ್ತಷ್ಟು ಹತ್ತಿರವಾಗಿದೆ ಎಂದು ಹೇಳಿದರು. ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿರುವುದರಿಂದ ಜನರಲ್ಲಿ ಸರ್ಕಾರದ ಬಗ್ಗೆ ವಿಶ್ವಾಸ ಹೆಚ್ಚಾಗಿದೆ. ರಾಜ್ಯ ಸರ್ಕಾರದ ಮೂರನೇ ವರ್ಷದ ಸಾಧನಾ ಸಮರ್ಪಣಾ ಸಮಾವೇಶ ತುಮಕೂರಿನಲ್ಲಿ ಯಶಸ್ವಿಯಾಗಿ ನಡೆದಿದೆ ಎಂದರು.
ಈ ನಡುವೆ ಸಂಪುಟ ಪುನರ್‌ರಚನೆ, ಹೊಸ ಮುಖಗಳಿಗೆ ಅವಕಾಶ ಮತ್ತು ಪ್ರಾದೇಶಿಕ ಸಮತೋಲನ ಸೇರಿದಂತೆ ಹಲವು ಅಂಶಗಳನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಮುಂದಿನ ಎರಡು ವಾರಗಳು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗುವ ಸಾಧ್ಯತೆ ಇದೆ.



