ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ: ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ಅನುದಾನ ಎಂದ ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸೇರಿದಂತೆ ಭರಪೂರ ಕೊಡುಗೆ ಘೋಷಿಸಲಾಗಿದೆ.

ಇಂದು ಸಂಜೆ ಮಿನಿವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಜೆಟ್ ನಲ್ಲಿ ಘೋಷಿಸಿದ್ದ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ದಾಖಲೆ ಪ್ರಮಾಣದಲ್ಲಿ 5,000 ಕೋಟಿ ರೂಪಾಯಿ ಅನುದಾನ ಹಂಚಿಕೆ ಮಾಡಲಾಗಿದೆ ಮತ್ತು ಕೃಷಿ ಇಲಾಖೆಗೆ 100 ಕೋಟಿ ಅನುದಾನ ಮೀಸಲಿಟ್ಟಿದ್ದೇವೆ ಎಂದರು.

ಸಭೆಯಲ್ಲಿ 56 ವಿಷಯಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ 46 ವಿಚಾರಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದ ಒಟ್ಟು ಮೊತ್ತ 11,770 ಕೋಟಿ ರೂ. ಆಗಿದ್ದು, ಬೀದರ್, ಮತ್ತು ರಾಯಚೂರಿನಲ್ಲಿ ಮಹಾನಗರ ಪಾಲಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಬೀದರ್ ಮತ್ತು ಕಲಬುರಗಿಯಲ್ಲಿ 7,200 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ನಾರಾಯಣಪುರ ಡ್ಯಾಂನಿಂದ ನೀರು ಸರಬರಾಜು ಮಾಡಲಾಗುತ್ತದೆ. ಈ ಯೋಜನೆಯ ಬಗ್ಗೆ ಕೇಂದ್ರಕ್ಕೂ ಮಾಹಿತಿ ನೀಡಿದ್ದೇವೆ ಎಂದು ಸಿಎಂ ತಿಳಿಸಿದರು.

ಪ್ರತ್ಯೇಕ ಸಚಿವಾಲಯ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ ಈ ವರ್ಷ 5000 ಕೋಟಿ ರೂ. ಕೊಟ್ಟಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. 371ಜೆ ಸೇರ್ಪಡೆಯಾಗಿ 10 ವರ್ಷ ಆಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಕೂಡ 5000 ಕೋಟಿ ಹಣ ನೀಡಬೇಕು ಎಂದು ನಿರ್ಣಯ ಮಾಡಿದ್ದೇವೆ. ಖಾಲಿ ಇರುವ 17439 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಕಲ್ಯಾಣ ಕರ್ನಾಟಕ ಸಂಪೂರ್ಣ ಆರೋಗ್ಯ ಅಭಿವೃದ್ಧಿ ಯೋಜನೆ ಜಾರಿಗೆ ಅನುಮೋದನೆ ನೀಡಲಾಗಿದೆ. ಇದರ ಅಡಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 45 ಹೊಸ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. 31 ಸಮುದಾಯ ಆರೋಗ್ಯ ಕೇಂದ್ರಗಳ ಮೇಲ್ದರ್ಜೆಗೆ ಏರಲಿವೆ. 9 ತಾಲೂಕು ಆಸ್ಪತ್ರೆಗಳನ್ನು ಉಪ ವಿಭಾಗೀಯ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ಎರಡು ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸುವ ನಿರ್ಧಾರ ಮಾಡಲಾಗಿದೆ.

ಇನ್ನು ಕೊಪ್ಪಳದಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣ ಕಾಮಗಾರಿಗೆ 56 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ನೀಡಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!