ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆಯ ಕುರಿತಾದ ಚರ್ಚೆಗಳು ಮತ್ತೆ ಮುಂಚೂಣಿಗೆ ಬಂದಿವೆ. ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಹಾಗೂ ಹಿರಿಯ ನಾಯಕರಾದ ಬಸವರಾಜ ರಾಯರೆಡ್ಡಿ ಅವರು ಈ ಕುರಿತು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ರಾಯರೆಡ್ಡಿ, “ನನ್ನ ವೈಯಕ್ತಿಕ ನಂಬಿಕೆಯ ಪ್ರಕಾರ ಇನ್ನೂ ಕನಿಷ್ಠ ಎರಡು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಒಂದು ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡಲೇಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಾದರೆ, ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಏಕೈಕ ಅರ್ಹ ನಾಯಕ ಎಂದರೆ ಅದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತ್ರ” ಎಂದು ಮುಕ್ತವಾಗಿ ಹೇಳಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆಯ ಯಾವುದೇ ತುರ್ತು ಪರಿಸ್ಥಿತಿ ನಿರ್ಮಾಣವಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಮಾಡಲು ಬಯಸಿದರೆ ಮೊದಲು ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಬೇಕಾಗುತ್ತದೆ. ಆದರೆ ಪ್ರಸ್ತುತ ಅಂತಹ ಯಾವುದೇ ವಾತಾವರಣ ರಾಜ್ಯದಲ್ಲಿ ಇಲ್ಲ” ಎಂದು ವದಂತಿಗಳಿಗೆ ತೆರೆ ಎಳೆದರು.
ಇದೇ ವೇಳೆ ಸಚಿವ ಸಂಪುಟದ ಬದಲಾವಣೆಯ ಬಗ್ಗೆಯೂ ಮಾತನಾಡಿದ ರಾಯರೆಡ್ಡಿ, ಮೇ 30ರ ಒಳಗಾಗಿ ರಾಜ್ಯ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದಿದ್ದಾರೆ. “ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷಗಳು ಕಳೆದಿರುವುದರಿಂದ, ಸಂಪುಟದಲ್ಲಿ ಹೊಸ ಮುಖಗಳಿಗೆ ಹಾಗೂ ಉತ್ಸಾಹಿ ಶಾಸಕರಿಗೆ ಅವಕಾಶ ಮಾಡಿಕೊಡುವುದು ಸೂಕ್ತ” ಎಂಬ ಆಶಯವನ್ನು ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಜನಪರ ಆಡಳಿತವನ್ನು ನೀಡುತ್ತಿದ್ದು, ಇದು ಹೀಗೆಯೇ ಮುಂದುವರಿದರೆ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲೂ ಸಿದ್ದರಾಮಯ್ಯ ಅವರ ಸಮರ್ಥ ನಾಯಕತ್ವದಲ್ಲೇ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಹಾದಿ ಸುಲಭವಾಗುತ್ತದೆ ಎಂದು ಬಸವರಾಜ ರಾಯರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



