ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ 2010ರಿಂದ ನೀಡಲಾದ ಜಾತಿಗಳ ಒಬಿಸಿ ಸ್ಥಾನಮಾನವನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಮೇ 22ರಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಗಳು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠ ವಿಚಾರಣೆ ನಡೆಸಿತು.
ಈ ವೇಳೆ ಮೀಸಲಾತಿ ಧರ್ಮದ ಆಧಾರದ ಮೇಲೆ ಇರಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಗವಾಯಿ ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್, ಇದು ಧರ್ಮದ ಆಧಾರದ ಮೇಲೆ ಅಲ್ಲ. ಇದು ಹಿಂದುಳಿದಿರುವಿಕೆಯ ಆಧಾರದ ಮೇಲೆ ಎಂದು ವಾದಿಸಿದರು.
ಪಶ್ಚಿಮ ಬಂಗಾಳದಲ್ಲಿ 2010 ರಿಂದ ನೀಡಲಾದ ಹಲವಾರು ಜಾತಿಗಳ ಒಬಿಸಿ ಸ್ಥಾನಮಾನವನ್ನ ಹೈಕೋರ್ಟ್ ರದ್ದುಗೊಳಿಸಿತ್ತು, ಸಾರ್ವಜನಿಕ ವಲಯದ ಉದ್ಯೋಗಗಳು ಮತ್ತು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅವರಿಗೆ ಮೀಸಲಾತಿ ಕಾನೂನುಬಾಹಿರ ಎಂದು ಹೇಳಿತ್ತು.