ಹೊಸದಿಗಂತ ಮಂಡ್ಯ:
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರೊಂದು ಆಕಸ್ಮಿಕ ಬೆಂಕಿಗೆ ತುತ್ತಾಗಿ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಮದ್ದೂರು ತಾಲೂಕಿನ ನಿಡಘಟ್ಟದ ಬಳಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗ್ರಾಮದ ರಂಜಿತಾ ಎಂಬುವವರು ಬೆಂಗಳೂರಿನ ತಾಯಿ ಮನೆಗೆ ತೆರಳಿ, ಗುರುವಾರ ಸಂಜೆ ಕಾರಿನಲ್ಲಿ ವಾಪಸ್ ಊರಿಗೆ ಮರಳುತ್ತಿದ್ದರು. ಈ ವೇಳೆ ನಿಡಘಟ್ಟ ತಲುಪುತ್ತಿದ್ದಂತೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕ್ಷಣಮಾತ್ರದಲ್ಲಿ ಎಚ್ಚೆತ್ತ ಚಾಲಕ ಕಿರಣ್, ತಕ್ಷಣ ವಾಹನವನ್ನು ನಿಲ್ಲಿಸಿ ರಂಜಿತಾ ಅವರನ್ನು ಕೆಳಗಿಳಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಬೆಂಕಿ ಕಾರಿನಾದ್ಯಂತ ಆವರಿಸಿದ್ದು, ವಾಹನ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಚಾಲಕ ಸಮಯಕ್ಕೆ ಸರಿಯಾಗಿ ಸ್ಪಂದಿಸದಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು.
ಪೊಲೀಸ್ ಮತ್ತು ಅಗ್ನಿಶಾಮಕ ದಳದ ಕಾರ್ಯಾಚರಣೆ: ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹತ್ತಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಪಿಎಸ್‌ಐ ರಂಗಸ್ವಾಮಿ ನೇತೃತ್ವದ ಪೊಲೀಸ್ ತಂಡವು ಹೆದ್ದಾರಿಯಲ್ಲಿ ಸುಟ್ಟ ಕಾರನ್ನು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಇದ್ದ ಅಡಚಣೆಯನ್ನು ನಿವಾರಿಸಿದರು. ಸದ್ಯ ಮದ್ದೂರು ಸಂಚಾರಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

