ಹೊಸದಿಗಂತ ವರದಿ ಕುಶಾಲನಗರ:
ಕೊಡಗು ಜಿಲ್ಲೆಯ ಕುಶಾಲನಗರ ಸಮೀಪದ ಗೊಂದಿಬಸವನಹಳ್ಳಿಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ವಾಹನವು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ರಕ್ಷಿತ್ ಎಂಬುವವರಿಗೆ ಸೇರಿದ್ದ ಮಾರುತಿ ಸುಜುಕಿ ರಿಟ್ಜ್ ಕಾರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣವಾಗಿ ಭಸ್ಮವಾಗಿದೆ. ಘಟನೆಯ ತೀವ್ರತೆಯಿಂದಾಗಿ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು.
ಬೆಂಕಿ ಹೊತ್ತಿಕೊಂಡ ವಿಷಯ ತಿಳಿಯುತ್ತಿದ್ದಂತೆ, ಕೂಡಲೇ ಕಾರ್ಯಪ್ರವೃತ್ತರಾದ ಕುಶಾಲನಗರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಬೆಂಕಿಯನ್ನು ಯಶಸ್ವಿಯಾಗಿ ನಂದಿಸುವ ಮೂಲಕ ಬೆಂಕಿ ಪಕ್ಕದ ಮನೆ ಅಥವಾ ಇತರ ವಸ್ತುಗಳಿಗೆ ಹರಡಿ ಆಗಬಹುದಾಗಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳಾದ ಲತೇಶ್ ಕುಮಾರ್, ಪ್ರೇಮಾನಂದ, ಸಂದೀಪ್, ಶಿವಾನಂದ, ಆನಂದ್ ಮತ್ತು ಪ್ರವೀಣ್ ಭಾಗವಹಿಸಿದ್ದರು. ಅಗ್ನಿಶಾಮಕ ದಳದ ಸಮಯಪ್ರಜ್ಞೆ ಮತ್ತು ತ್ವರಿತ ಕಾರ್ಯಾಚರಣೆಯಿಂದ ಭಾರೀ ನಷ್ಟ ತಪ್ಪಿದಂತಾಗಿದೆ.

