ಹೊಸದಿಗಂತ ವರದಿ ಮಡಿಕೇರಿ:
ಕಾರೊಂದು ಕೆರೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ಸಿದ್ದಾಪುರ ಸಮೀಪದ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಡೆದಿದೆ.
ಸಿದ್ದಾಪುರ ಹೈಸ್ಕೂಲ್ ಪೈಸಾರಿ ನಿವಾಸಿ, ಬಾಡಗ ಬಾಣಂಗಾಲ ಗ್ರಾಮದ ಎಲ್ಕ್ ಹಿಲ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ವಿಜೇಶ್ (36), ಪತ್ನಿ ಪಮಿತಾ (34) ಹಾಗೂ ಮಗಳು ಲಿಯಾ (4) ಮೃತಪಟ್ಟವರು.
ಮಂಗಳವಾರ ರಾತ್ರಿ ಸಿದ್ದಾಪುರದಿಂದ ಬಾಡಗಬಾಣಂಗಾಲಕ್ಕೆ ತೆರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಬಾಡಗ ಬಾಣಂಗಾಲ ಗ್ರಾಮದ ಶಿಲ್ಪಿ ಎಸ್ಟೇಟ್ ಬಳಿ ಕೆರೆಗೆ ಉರುಳಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬುಧವಾರ ಬೆಳಗ್ಗೆ ತೋಟದ ಕೆರೆಯಲ್ಲಿ ಕಾರು ಬಿದ್ದಿರುವುದನ್ನು ಕಾರ್ಮಿಕರು ಕಂಡ ಬಳಿಕ ಘಟನೆ ಬೆಳಕಿಗೆ ಬಂದಿದೆ. ಬಳಿಕ ಮೂವರ ಮೃತದೇಹವನ್ನು ಕೆರೆಯಿಂದ ಹೊರತೆಗೆಯಲಾಗಿದ್ದು ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



