ದೇಶದ್ರೋಹಿಗಳಿಗೆ ಕಾಂಗ್ರೆಸ್ ನಿಂದ ರತ್ನಗಂಬಳಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಹೊಸದಿಗಂತ ವರದಿ,ಚಿತ್ರದುರ್ಗ

ಭ್ರಷ್ಟ ಕಾಂಗ್ರೆಸ್ ಪಕ್ಷವು ದೇಶದ್ರೋಹಿಗಳಿಗೆ ರತ್ನಗಂಬಳಿ ಹಾಕುತ್ತಿದೆ. ಇದರ ಪರಿಣಾಮವಾಗಿ ರಾಜ್ಯ ಸೇರಿದಂತೆ ದೇಶದಲ್ಲಿ ಏನೆಲ್ಲಾ ಅನಾಹುತಗಳು ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

ನಗರದ ಹೊರ ವಲಯದ ಮಾಳಪನಹಟ್ಟಿ ಬಳಿಯ ತಿರುಮಲ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಹುಲ್ ಗಾಂಧಿ ವಿದೇಶಗಳಿಗೆ ಹೋಗಿ ನಮ್ಮ ದೇಶದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅಮೆರಿಕಾಗೆ ಹೋದ ಸಂದರ್ಭದಲ್ಲಿ ಶೋಷಿತ ಸಮುದಾಯಗಳಿಗೆ ನೀಡುವ ಮೀಸಲಾತಿ ಸ್ಥಗಿತಗೊಳಿಸುವುದಾಗಿ ಹೇಳಿರುವುದು ಅಕ್ಷಮ್ಯ ಅಪರಾಧ ಎಂದು ಹರಿಹಾಯ್ದರು.

ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿಯಂತಹ ಮಹಾನ್ ನಾಯಕರು ಕೇಂದ್ರದಲ್ಲಿ ವಿರೋಧ ಪಕ್ಷದಲ್ಲಿದ್ದು ಕೆಲಸ ಮಾಡಿದ್ದಾರೆ. ಆದರೆ ಅವರು ವಿದೇಶಗಳಿಗೆ ಹೋದ ಸಂದರ್ಭದಲ್ಲಿ ಎಲ್ಲಿಯೂ ನಮ್ಮ ದೇಶದ ಘನತೆಗೆ ಧಕ್ಕೆ ಬರುವ ರೀತಿಯಲ್ಲಿ ನಡೆದುಕೊಂಡಿಲ್ಲ. ಯಾವುದೇ ದೇಶ ವಿರೋಧಿ ಹೇಳಿಕೆಗಳನ್ನು ನೀಡಿಲ್ಲ. ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಿರುವ ಸಂಭ್ರಮದಲ್ಲಿ ವಿದೇಶಗಳಿಗೆ ಹೋದಾಗ ನಮ್ಮ ದೇಶದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ಇದರ ಪರಿಣಾಮವಾಗಿ ರಾಜ್ಯದ ವಿವಿಧೆಡೆಗಳಲ್ಲಿ ಗಲಾಟೆ ನಡೆಯುತ್ತಿವೆ. ನಾಗಮಂಗಲದಲ್ಲಿ ಶಾಂತಿಯುತ ಮೆರವಣಿಗೆ ನಡೆಸುವವರ ಮೇಲೆ ಕಲ್ಲು ತೂರಲಾಗಿದೆ. ತಲವಾರ್‌ಗಳನ್ನು ಹಿಡಿದು, ಪೆಟ್ರೋಲ್ ಬಾಂಬ್‌ಗಳನ್ನು ಹಾಕಿ ಮಾರಣಾಂತಿಕ ಹಲ್ಲೆ ಮಾಡಲಾಗಿದೆ. ಅಂಗಡಿಗಳು, ವಾಹನಗಳಿಗೆ ಬೆಂಕಿ ಹಚ್ಚಿ ಸುಡಲಾಗಿದೆ. ಇದರಿಂದ ಅನೇಕ ಜನರ ಬದುಕು ಬೀದಿಗೆ ಬಂದಂತಾಗಿದೆ ಎಂದು ಹರಿಹಾಯ್ದರು.

ಪಾಂಡವಪುರದಲ್ಲಿ ಪೊಲೀಸರು ಬೂಟು ಕಾಲಿನಲ್ಲಿ ಸಂಘದ ಕಾರ್ಯಾಲಯ ಪ್ರವೇಶಿಸಿ ಉದ್ದಟತನ ಮೆರೆದಿದ್ದಾರೆ. ದಾವಣಗೆರೆಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಮಾಡುವ ಸಂಚು ಬಯಲಾಗಿದೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ., ಶೋಷಿತರು, ರೈತರಿಗೆ ರಾಜ್ಯ ಸರ್ಕಾರದಿಂದ ನ್ಯಾಯ ಸಿಗುವುದಿಲ್ಲ. ಕಾಂಗ್ರೇಸ್ ಸರ್ಕಾರ ತನ್ನ ಹುಳುಕು ಮುಚ್ಚಿಕೊಳ್ಳಲು ಈ ರೀತಿಯ ದಳ್ಳುರಿಗಳನ್ನು ಸೃಷ್ಠಿಸುತ್ತಿದೆ ಎಂದು ಕುಟುಕಿದರು.

ಮೈಸೂರಿನ ಮೂಡಾ ಹಗರಣ ವಿರೋಧಿಸಿ ಬಿಜೆಪಿ ಪಾದಯಾತ್ರೆ ನಡೆಸಿತು. ಇದಕ್ಕೆ ಪ್ರತಿಯಾಗಿ ಕಾಂಗ್ರೇಸ್ ಜನಾಂದೋಲನ ಕಾರ್ಯಕ್ರಮ ನಡೆಸುವ ಮೂಲಕ ಜನರ ವಿಶ್ವಾಸ ಗಳಿಸುವ ನಾಟಕ ಮಾಡಿತು. ವಿಧಾನಸೌಧದಲ್ಲಿ ಕೆಲಸ ಮಾಡಬೇಕಾದ ಮುಖ್ಯಮಂತ್ರಿ ಕೆಲಸ ಕಾರ್ಯ ಬಿಟ್ಟು ನಾಲ್ಕು ದಿನ ಮೈಸೂರಿನಲ್ಲಿ ಠಿಕಾಣಿ ಹೂಡಿದರು. ವಾಲ್ಮೀಕಿ ನಿಗಮದ ೧೮೭ ಕೋಟಿ ರೂ. ಅಕ್ರಮ ಮಾಡಿರುವುದನ್ನು ಸದನದಲ್ಲಿ ಸ್ವತಃ ಸಿದ್ದರಾಮಯ್ಯನವರೇ ಒಪ್ಪಿಕೊಂಡಿದ್ದಾರೆ ಎಂದು ಕಿಡಿಕಾರಿದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!