ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರಚೋದನಕಾರಿ ಭಾಷಣ ನಡೆಸಿದ ಆರೋಪದಲ್ಲಿ ಹಿಂದು ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನೊಟೀಸ್ ಜಾರಿ ಮಾಡಿರುವ ಪೊಲೀಸರಿಗೆ ಪ್ರಕರಣದ ಮುಂದಿನ ವಿಚಾರಣೆವರೆಗೆ ಬಂಧನ ಸಹಿತ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶ ನೀಡಿದೆ.
ಏನಿದು ಪ್ರಕರಣ?
ಇತ್ತೀಚೆಗೆ ಪುತ್ತೂರು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಡಾ. ಪ್ರಭಾಕರ ಭಟ್ ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಈಶ್ವರಿ ಪದ್ಮುಂಜ ಎಂಬವರು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಡಾ. ಭಟ್ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಿದ್ದರು.
ಪೊಲೀಸರ ಈ ಕ್ರಮವನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಡಾ. ಭಟ್, ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ದ್ವೇಷಪೂರಿತ ಎಂದು ವಾದಿಸಿದ್ದರು. ವಾದ, ಪ್ರತಿವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆ ವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚಿಸಿದ್ದು, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ನಿಗದಿಪಡಿಸಿದೆ.
ಡಾ. ಪ್ರಭಾಕರ ಭಟ್ ವಿರುದ್ಧ ಕೇಸ್, ನೊಟೀಸ್: ಬಂಧನ, ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚನೆ

