ಹೊಸದಿಗಂತ ಡಿಜಿಟಲ್ ಡೆಸ್ಕ್:
ಬುಡಕಟ್ಟು ಜನರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪ್ರಸಿದ್ಧ ಚಿತ್ರನಟ ವಿಜಯ್ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಏಪ್ರಿಲ್‌ನಲ್ಲಿ ನಡೆದ ನಟ ಸೂರ್ಯ ಅಭಿನಯನದ ರೆಟ್ರೊ ಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ವಿಜಯ್, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು 500 ವರ್ಷಗಳ ಹಿಂದಿನ ಬುಡಕಟ್ಟು ಯುದ್ಧಗಳಿಗೆ ಹೋಲಿಸಿದ್ದರು. ಇದರಿಂದ ಬುಡಕಟ್ಟು ಜನಾಂಗದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ರಾಜ್ಯದ ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ್ ನಾಯಕ್ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಜೂನ್ 17ರಂದು ಸಲ್ಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಜಯ್ ದೇವರಕೊಂಡ, ಮೇ 3ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ದೇವರಕೊಂಡ, ನನ್ನ ಹೇಳಿಕೆಯು ಯಾವುದೇ ಒಂದು ಸಮುದಾಯವನ್ನು ಗುರಿಯಾಗಿಸುವ ಉದ್ದೇಶವಿರಲಿಲ್ಲ. ನನ್ನ ಹೇಳಿಕೆಯಿಂದ ನೋವುಂಟಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಶಾಂತಿ, ಪ್ರಗತಿ ಮತ್ತು ಒಗ್ಗಟ್ಟಿನ ಬಗ್ಗೆ ಮಾತನಾಡುವುದೇ ನನ್ನ ಏಕೈಕ ಗುರಿಯಾಗಿತ್ತು ಎಂದು ಹೇಳಿದ್ದರು.