November 16, 2026
Monday, November 16, 2026
spot_img

ಕೆ.ಎಸ್ ಈಶ್ವರಪ್ಪ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್‌ : ಲೋಕಾಯುಕ್ತಕ್ಕೆ ಸುಪ್ರೀಂ ನೋಟಿಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿದೆ.

ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಪ್ರಕರಣದ ಕುರಿತು ಮಾಹಿತಿ ನೀಡುವಂತೆ ಲೋಕಾಯುಕ್ತಕ್ಕೆ ಸೂಚಿಸಿದೆ. ನ್ಯಾಯಮೂರ್ತಿ ಎಂ.ಎಂ.ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿತು.

ವಿಚಾರಣೆ ಬಳಿಕ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸುವಂತೆ ನಿರ್ದೇಶನ ನೀಡಿದೆ.ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಕೆ.ಇ.ಕಾಂತೇಶ್ ಹಾಗೂ ಸೊಸೆ ಶಾಲಿನಿ ಅವರು ತಮ್ಮ ಆದಾಯದ ಮೂಲಗಳಿಗೆ ಹೋಲಿಸಿದರೆ ಹೆಚ್ಚಿನ ಪ್ರಮಾಣದ ಆಸ್ತಿ ಗಳಿಸಿದ್ದಾರೆ ಎಂಬ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ವಕೀಲ ಬಿ.ವಿನೋದ್ ಅವರು ಈ ಸಂಬಂಧ ದೂರು ಸಲ್ಲಿಸಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಈ ಹಿಂದೆ ಮುಕ್ತಾಯ ವರದಿ (ಬಿ ರಿಪೋರ್ಟ್) ಸಲ್ಲಿಸಿದ್ದರು. ಆದರೆ, ದೂರುದಾರರು ಈ ವರದಿಯನ್ನು ವಿಚಾರಣಾ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಇದರ ಬೆನ್ನಲ್ಲೇ ಶಿವಮೊಗ್ಗ ಲೋಕಾಯುಕ್ತ ಪೊಲೀಸರು ಹೊಸ ಎಫ್‌ಐಆರ್ ದಾಖಲಿಸಿದ್ದರುಹೊಸ ಎಫ್‌ಐಆರ್ ಪ್ರಶ್ನಿಸಿ ಕೆ.ಎಸ್.ಈಶ್ವರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಈಶ್ವರಪ್ಪ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

Must Read