ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ , ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಮಾವಿನ ದರ ಕುಸಿದಿರುವುದು ಹಾಗೂ ಆಂಧ್ರಕ್ಕೆ ಪೂರೈಕೆ ಮಾಡಲು ನಿರ್ಬಂಧ ಹೇರಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಮಾವು ಬೆಳೆಗಾರರಿಗೆ ಕೇಂದ್ರದಿಂದ ಹೆಚ್ಚಿನ ನೆರವನ್ನು ಪಡೆಯುವ ಜವಾಬ್ದಾರಿಯನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು.
ನಂದಿ ಬೆಟ್ಟದಲ್ಲಿ ನಡೆಸಬೇಕಾಗಿದ್ದ ಸಚಿವ ಸಂಪುಟದ ಇಂದಿನ ಸಭೆಯನ್ನು ಹಲವು ಕಾರಣಗಳಿಂದ ಬೆಂಗಳೂರಿನಲ್ಲಿ ನಡೆಸಲಾಗಿದೆ. ಮುಂದಿನ ಸಂಪುಟ ಸಭೆಯನ್ನು ಜುಲೈ 16 ಅಥವಾ 17ರಂದು ನಂದಿಬೆಟ್ಟದಲ್ಲಿ ನಡೆಸಲಾಗುವುದು ಎಂದರು. ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವ ಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5 ಲಕ್ಷ ರೂಪಾಯಿ ವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.
ರಾಜ್ಯದ ದುರ್ಗಮ ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಿಗೆ ಪ್ರಾಥಮಿಕ ಆರೋಗ್ಯ ಮತ್ತು ಆರೈಕೆ ಸೇವೆಗಳನ್ನು ಒದಗಿಸಲು ಸಂಚಾರಿ ಆರೋಗ್ಯ ಘಟಕಗಳನ್ನು 18 ಕೋಟಿ 97 ಲಕ್ಷ ರೂಪಾಯಿ ವೆಚ್ಚದಲ್ಲಿ ಖರೀದಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು. ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಅನುಭವ ಮಂಟಪದ ವೆಚ್ಚವನ್ನು ಪರಿಷ್ಕೃತಗೊಳಿಸಲಾಗಿದ್ದು, ಈ ಮೊದಲು ನಿಗದಿ ಪಡಿಸಿದ್ದ 612 ಕೋಟಿ ರೂಪಾಯಿ ಬದಲಿಗೆ ಈ ಅಂದಾಜು ವೆಚ್ಚವನ್ನು 742 ಕೋಟಿ ರೂಪಾಯಿಗೆ ಹೆಚ್ಚಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ನಗರ ಮತ್ತು ಗ್ರಾಮೀಣ ಭಾಗದಲ್ಲಿ ವಿವಿಧ ವಸತಿ ಯೋಜನೆಗಳಡಿ ನಿರ್ಮಿಸುವ ವಸತಿಗಳ ಹಂಚಿಕೆಗೆ ಅಲ್ಪಸಂಖ್ಯಾತರಿಗೆ ನಿಗದಿಪಡಿಸಿದ್ದ ಮೀಸಲಾತಿ ಪ್ರಮಾಣವನ್ನು ಶೇಕಡ 10ರಿಂದ 15ಕ್ಕೆ ಏರಿಸಲು ಸಂಪುಟ ಒಪ್ಪಿಗೆ ನೀಡಿದೆ