ಹೊಸದಿಗಂತ ಡಿಜಿಟಲ್ ಡೆಸ್ಕ್:
“ಜಾತಿ ಗಣತಿ” ಎಂದೇ ಜನಪ್ರಿಯವಾಗಿ ಕರೆಯಲ್ಪಡುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಪರಿಣಾಮ ಬೀರುವ ತಾಂತ್ರಿಕ ಸಮಸ್ಯೆಗಳನ್ನು “ಬಹುತೇಕ ಬಗೆಹರಿಸಲಾಗಿದೆ” ಮತ್ತು ಸಮೀಕ್ಷೆಯು ಈಗ ಪೂರ್ಣ ಪ್ರಮಾಣದಲ್ಲಿ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದು ಪ್ರತಿಪಾದಿಸಿದ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಜಾತಿ ಗಣತಿ ವಿಸ್ತರಿಸುವುದಿಲ್ಲ ಎಂದು ಒತ್ತಿ ಹೇಳಿದರು.
ಜಾತಿ ಗಣತಿಗೆ ಸಂಬಂಧಿಸಿದಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಸಿಎಂ, “ಸಮೀಕ್ಷೆಯ ನಿಧಾನಗತಿ”, ತಾಂತ್ರಿಕ ದೋಷಗಳು ಮತ್ತು ಸರ್ವರ್ ಸಮಸ್ಯೆಗಳು ದತ್ತಾಂಶ ಸಂಗ್ರಹಣೆಯ ಮೇಲೆ ಪರಿಣಾಮ ಬೀರುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ಆರ್ ನಾಯಕ್, ಡಿಸಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳು ಭಾಗವಹಿಸಿದ್ದರು.
“ಸಮೀಕ್ಷಾ ಕಾರ್ಯವು ಸೆಪ್ಟೆಂಬರ್ 22 ರಂದು ಪ್ರಾರಂಭವಾಗಿದ್ದು, ನಿಗದಿಯಂತೆ ಅಕ್ಟೋಬರ್ 7 ರೊಳಗೆ ಪೂರ್ಣಗೊಳ್ಳಲಿದೆ. ಕೆಲವು ತಾಂತ್ರಿಕ ಸಮಸ್ಯೆಗಳಿವೆ, ಅವೆಲ್ಲವನ್ನೂ ಬಹುತೇಕ ಪರಿಹರಿಸಲಾಗಿದೆ. ಆದ್ದರಿಂದ, ಇಂದಿನಿಂದ ಸಮೀಕ್ಷೆಯ ಪೂರ್ಣ ಪ್ರಮಾಣದಲ್ಲಿ ನಡೆಯಲಿದೆ” ಎಂದು ಸಿದ್ದರಾಮಯ್ಯ ಹೇಳಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳು ಸಮೀಕ್ಷೆಯನ್ನು “ಬಹಳ ಗಂಭೀರವಾಗಿ” ಪರಿಗಣಿಸುವಂತೆ ಮತ್ತು ಗಡುವಿನೊಳಗೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.