ಜಾತಿ ವ್ಯವಸ್ಥೆ ಹೋಗಿ ಸಮಾನತೆಯ ಸಮಾಜ ನಿರ್ಮಾಣವಾಗಬೇಕಾಗಿದೆ: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ವರದಿ,ಮೈಸೂರು:

ಸ್ವಾತಂತ್ರ್ಯ ಬಂದು 76 ವರ್ಷಗಳ ಕಳೆದರೂ ಕೂಡ ಇನ್ನೂ ಜಾತಿ ವ್ಯವಸ್ಥೆ ತಾಂಡವವಾಡುತ್ತಿದೆ. ಇದು ಹೋಗಿ, ಸಮಾನತೆಯ ಸಮಾಜ ನಿರ್ಮಾಣವಾಗಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶನಿವಾರ ನಗರದ ಕಲಾಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟ ಮೈಸೂರು ಕಲಾಮಂದಿರದಲ್ಲಿ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈಗಲೂ ಸಮಾಜದಲ್ಲಿ ಶ್ರೇಣೀಕೃತ ವ್ಯವಸ್ಥೆ ಹೋಗಬೇಕು. ಈ ಜಾತಿ ವ್ಯವಸ್ಥೆಯಲ್ಲಿ ಒಬ್ಬರ ಮೇಲೆ ಒಬ್ಬರು ಕೂತಿದ್ದಾರೆ. ಮೇಲೆ ಇರುವವನು ಮೇಲು, ಕೆಳಗಡೆ ಇರುವವನು ಕೀಳು ಎಂಬ ಭಾವನೆ ಇದೆ. ಇದು ಹೋಗಬೇಕು ಇದು ಸಮಾನವಾಗಿ ಇರಬೇಕು. ಸಮಾಜ ಸಮಾನವಾಗಿರಬೇಕು ಎಂದು ಪ್ರತಿಪಾದಿಸಿದರು.

ನಮ್ಮ ಐದು ಗ್ಯಾರಂಟಿಗಳಲ್ಲಿ ಯಾವುದೇ ಜಾತಿಗೆ ಅಂತ ನಮ್ಮ ಕಾರ್ಯಕ್ರಮಗಳನ್ನು ಜಾರಿ ಮಾಡಿಲ್ಲ. ಎಲ್ಲಾ ಜಾತಿ ಸಮುದಾಯಗಳಿಗೂ ಗ್ಯಾರಂಟಿ ಅನುಕೂಲ ಮಾಡಿದ್ದೇವೆ. ನಮ್ಮ ಪಂಚ ಗ್ಯಾರಂಟಿಗಳಿಗೆ ಯಾವುದೇ ಜಾತಿ ಧರ್ಮಗಳಿಲ್ಲ. ಇದೆಲ್ಲ ಬಸವಾದಿ ಶರಣರ ಪ್ರೇರಣೆಯಿಂದ ಮಾಡುತ್ತಿರುವ ಕೆಲಸ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅರಣ್ಯ ಜೀವಿಶಾಸ್ತç ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮಾತನಾಡಿ, ಯುವಜನತೆ ಮಾದಕ ವಸ್ತುಗಳಿಗೆ ಮತ್ತು ಪಾಶ್ಚಾತ್ಯ ಸಂಸ್ಕೃತಿಯ ದಾಸರಾಗಿ ನಮ್ಮ ಸಂಸ್ಕೃತಿ, ಪರಂಪರೆಯನ್ನು ಮರೆಯುತ್ತಿದ್ದಾರೆ. ಹಾಗಾಗಿ ಅವರಿಗೆ ನಮ್ಮ ಸಂಸ್ಕೃತಿ, ಪರಂಪರೆಯನ್ನು ತಿಳಿಸು, ಅರಿವು ಮೂಡಿಸಬೇಕು. ಅವರಿಗೆ ಬಾಲ್ಯದಿಂದಲೇ ವಚನ ಸಾಹಿತ್ಯ ಕಲಿಸಬೇಕು ಎಂದು ಸಲಹೆ ನೀಡಿದರು.

ಬಸವಾದಿ ಪ್ರಮಥರು ಈ ಜಗತ್ತಿಗೆ ನೀಡಿರುವ ಕೊಡುಗೆ ಅನುಪಮವಾಗಿದೆ. ಕಾರ್ಲ್ ಮಾರ್ಕ್್ಸ ನ ದಾಸ್ ಕ್ಯಾಪಿಟಲ್ ಬರುವ ಮೊದಲೆ ದುಡಿಮೆಗೆ ಬೆಲೆ ನೀಡಿ, ಜಾತ್ಯತೀತ ಸಮ ಸಮಾಜದ ಕಲ್ಪನೆಯನ್ನು ನೀಡಿದವರು ಬಸವಾದಿ ಪ್ರಮಥರು ಎಂದು ಹೇಳಿದರು.

ಕಾರ್ಯಕ್ತಮದ ಸಾನಿಧ್ಯವನ್ನು ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ವಹಿಸಿದ್ದರು. ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ. ಶಾಸಕರುಗಳಾದ ಟಿ.ಎಸ್.ಶ್ರೀವತ್ಸ, ತನ್ವೀರ್ ಸೇಠ್, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ಜಿ.ಡಿ.ಹರೀಶ್ ಗೌಡ, ಹೆಚ್.ಎಂ.ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಡಿ.ತಿಮ್ಮಯ್ಯ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ವೀರಶೈವ-ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಮೈಸೂರಿನ ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!