ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನದಿ ನೀರು ವಿವಾದ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವ ಮುನ್ನಾ ದಿನವೇ ಕರ್ನಾಟಕ ಸರ್ಕಾರ ಮಹತ್ವದ ಹೇಳಿಕೆ ದಾಖಲಿಸಿದೆ.
ಕಾವೇರಿ ನೀರು ಬಿಡುಗಡೆಗೆ ತಮಿಳುನಾಡು ಒತ್ತಾಯ ಮಾಡಬಾರದು ಎಂದು ಅಫಿಡವಿಟ್ ಸಲ್ಲಿಸಿದೆ. ಅಲ್ಲದೇ, ಬಿಳಿಗುಂಡ್ಲುವಿನ ಅಂತಾರಾಜ್ಯ ಗಡಿಯಲ್ಲಿ ಮೇಕೆದಾಟು ಸಮತೋಲನ ಜಲಾಶಯ – ಕುಡಿಯುವ ನೀರಿನ ಯೋಜನೆ ನಿರ್ಮಾಣಕ್ಕೆ ತಮಿಳುನಾಡಿನ ಅನಗತ್ಯ ವಿರೋಧದಿಂದ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದೂ ಕರ್ನಾಟಕ ತಿಳಿಸಿದೆ.
ಕರ್ನಾಟಕದಿಂದ ಕಾವೇರಿ ನದಿ ನೀರು ಬಿಡುಗಡೆಗೆ ಹೊಸ ನಿರ್ದೇಶನಗಳ ನೀಡುವಂತೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಆ. 25ರಂದು ವಿಚಾರಣೆ ನಡೆಸಲಿದೆ. ಹೀಗಾಗಿ ಇದಕ್ಕೂ ಮುನ್ನ ಕರ್ನಾಟಕ ಸರ್ಕಾರ ತನ್ನ ಅಫಿಡವಿಟ್ ಸಲ್ಲಿಸಿದೆ.
ಈ ಬಾರಿ ಕಾವೇರಿ ಕೊಳ್ಳದಲ್ಲಿ ಶೇ.42ರಷ್ಟು ಮಳೆ ಕೊರತೆಯಿದೆ. ಕರ್ನಾಟಕ ಸಿಡಬ್ಲ್ಯುಎಂಎ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದೆ. ಸಾಮಾನ್ಯ ವರ್ಷದಂತೆ ನೀರು ಹರಿಸಲು ತಮಿಳುನಾಡು ಕೇಳುತ್ತಿದೆ. ತಮಿಳುನಾಡು 36.76 ಟಿಎಂಸಿ ನೀರು ಹರಿಸುವಂತೆ ಕೇಳುತ್ತಿದೆ. ಆದ್ರೆ, ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದು, ಕರ್ನಾಟಕದ ಜಲಾಶಯಗಳಲ್ಲಿ 42% ಕಡಿಮೆ ನೀರು ಸಂಗ್ರಹವಾಗಿದೆ. ಕಾವೇರಿ ಜಲಾನಯನದಲ್ಲಿರುವ ನೀರು ಕರ್ನಾಟಕಕ್ಕೆ ಸಾಕಾಗುವುದಿಲ್ಲ. ಬೆಳೆ ಮತ್ತು ಕುಡಿಯುವ ನೀರಿಗೆ ಕೊರತೆಯಾಗಲಿದೆ.