ಹೊಸದಿಗಂತ ವರದಿ ಬೆಳಗಾವಿ:
ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ದಂಧೆಗೆ ಸಿಸಿಬಿ ಪೊಲೀಸರು ಬ್ರೇಕ್ ಹಾಕಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಗಾಂಜಾ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಳಗಾವಿ ನಗರದ ತಿಲಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅನಗೋಳ-ವಡಗಾವಿ ರಸ್ತೆಯ ಕಾಟಾ ಗೌಂಡ್ ಹಾಗೂ ಸಂತಮೀರಾ ಶಾಲೆಯ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಪಿಐ ಮಂಜುನಾಥ ನಾಯಕ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.
ಈ ವೇಳೆ ಬೆಳಗಾವಿಯ ಕೃಷ್ಣ ಪಾಟೀಲ (24) ಮತ್ತು ರೂಪೇಶ ಶಿಂದೆ (26) ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಸುಮಾರು 70 ಸಾವಿರ ರೂಪಾಯಿ ಮೌಲ್ಯದ 1.346 ಕೆಜಿ ಗಾಂಜಾ ಹಾಗೂ ಒಂದು ಲಕ್ಷ ರೂಪಾಯಿ ಮೌಲ್ಯದ ಬಜಾಜ್ ಪಲ್ಸರ್ ಬೈಕ್ ಸೇರಿದಂತೆ ಒಟ್ಟು 21.70 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ವಶಪಡಿಸಿಕೊಂಡ ಗಾಂಜಾವನ್ನು ಖಾನಾಪುರದ ‘ವಿನು’ ಎಂಬಾತನಿಂದ ತಂದಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ತಿಲಕವಾಡಿ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಗಾಂಜಾ ಪೂರೈಕೆ ಮಾಡಿರುವುದಾಗಿ ಹೇಳಲಾದ ಮೂರನೇ ಆರೋಪಿಯ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



