ಹೊಸದಿಗಂತ ವರದಿ ಚಿತ್ರದುರ್ಗ:
ಕೆಪಿಎಸ್‌ಸಿ ಹಗರಣ ಕುರಿತು ಸಮಗ್ರ ತನಿಖೆ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ನಗರದ ಸಟೇಡಿಯಂ ಕ್ರಾಸ್‌ನ ವೀರಯೋಧ ಚೈತನ್ಯ ವೃತ್ತದಲ್ಲಿ ಜಮಾಯಿಸಿ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ಬಸ್ ಸಮಸ್ಯೆ, ವಿದ್ಯಾರ್ಥಿ ನಿಲಯ ಸಮಸ್ಯೆ, ಸಾರಿಗೆ ಕೊರತೆ, ಉಪನ್ಯಾಸಕರ ಸಮಸ್ಯೆ, ಕೆಪಿಎಸ್‌ಸಿ (KPSC) ಹಗರಣದ ತನಿಖೆ ಹಾಗೂ ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಹಾಗೂ ಮನವಿ.
ವಿದ್ಯಾರ್ಥಿಗಳ ಸಾರಿಗೆ ಸಮಸ್ಯೆ :
ಚಿತ್ರದುರ್ಗ ನಗರದ ವಿವಿಧ ಕಾಲೇಜುಗಳಿಗೆ ಗ್ರಾಮಾಂತರ ಪ್ರದೇಶಗಳಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲ. ಸಕಾಲದಲ್ಲಿ ಬಸ್‌ಗಳು ಸಿಗದೆ ಪರದಾಡುತ್ತಿದ್ದಾರೆ. ಬಸ್ ಪಾಸ್‌ಗಳಿದ್ದರೂ ನಿರ್ವಾಹಕರು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದಿರುವುದು ಹಾಗೂ ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವ್ಯತ್ಯಯವಾಗುತ್ತಿದೆ. ಕೂಡಲೇ ಹೆಚ್ಚುವರಿ ಬಸ್‌ಗಳನ್ನು ಬಿಡಬೇಕು. ಪರೀಕ್ಷಾ ಸಂದರ್ಭಗಳಲ್ಲಿ ಪರೀಕ್ಷಾ ಸಮಯಕ್ಕೆ ಅನುಗುಣವಾಗಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಬೇಕು ಆಗ್ರಹಿಸಿದರು.
ವಿದ್ಯಾರ್ಥಿ ನಿಲಯಗಳ ಸಮಸ್ಯೆ :
ಚಿತ್ರದುರ್ಗ ಜಿಲ್ಲೆಯ ಡಿ.ದೇವರಾಜ ಅರಸು ವಿದ್ಯಾರ್ಥಿ ನಿಲಯಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ. ಗುಣಮಟ್ಟದ ಊಟ ತಿಂಡಿ ದೊರೆಯುತ್ತಿಲ್ಲ. ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಅನೇಕ ಸಮಸ್ಯೆಗಳಿವೆ. ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳ ಗೋಳು ಕೇಳುವವರಿಲ್ಲದಂತಾಗಿದೆ ಎಂದು ಎಂದು ಪ್ರತಿಭಟನಾಕಾರರು ದೂರಿದರು.
ಇದನ್ನೂ ಓದಿ:
ಉಪನ್ಯಾಸಕರ ಕೊರತೆ ಹಾಗೂ ಶೈಕ್ಷಣಿಕ ಗುಣಮಟ್ಟ :
ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಸಮರ್ಪಕವಾಗಿ ಖಾಯಂ ಉಪನ್ಯಾಸಕರನ್ನು ನೇಮಿಸಿಲ್ಲ. ಅಲ್ಲದೇ ಅವರ ಗೌರವಧನ ಬಿಡುಗಡೆಯಲ್ಲಿ ವಿಳಂಬವಾಗುತ್ತಿದೆ. ಹಾಗಾಗಿ ಬೋಧನಾ ಪ್ರಕ್ರಿಯೆ ಸಂಪೂರ್ಣ ಹದಗೆಟ್ಟಿದೆ. ತಕ್ಷಣವೇ ಎಲ್ಲಾ ಪದವಿ ಕಾಲೇಜುಗಳಿಗೆ ಅಗತ್ಯವಿರುವ ಉಪನ್ಯಾಸಕರನ್ನು ನೇಮಿಸಿ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಕೆಪಿಎಸ್‌ಸಿ ಹಗರಣದ ಉನ್ನತ ಮಟ್ಟದ ತನಿಖೆ :
ರಾಜ್ಯದಲ್ಲಿ ಇತ್ತೀಚೆಗೆ ಮುನ್ನೆಲೆಗೆ ಬಂದಿರುವ ಕೆಪಿಎಸ್‌ಸಿ (kpsc) ನೇಮಕಾತಿ ಹಗರಣಗಳು ಮತ್ತು ಅವ್ಯವಹಾರಗಳಿಂದ ಲಕ್ಷಾಂತರ ಹೈಟ್ಸ್ / ಅಭ್ಯರ್ಥಿಗಳ ಭವಿಷ್ಯಕ್ಕೆ ಕತ್ತಲು ಕವಿದಂತಾಗಿದೆ. ಹಾಗಾಗಿ ಈ ಕುರಿತು ಸಮಗ್ರ ತನಿಖೆ ನಡೆಸಬೇಕು. ಈ ಹಿನ್ನೆಲೆಯಲ್ಲಿ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಆ ಮೂಲಕ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ವಿದ್ಯಾರ್ಥಿಗಳ ಬದುಕು ಹಾಗೂ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಜಿಲ್ಲಾಡಳಿತ ಹಾಗೂ ಸರ್ಕಾರ ಈ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲವಾಗಿವೆ. ಕೂಡಲೇ ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು. ಆ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಬೇಕು. ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ತೀವ್ರ ಸ್ವರೂಪದ ಹಾಗೂ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ವಿವಿಧ ಪದಾಧಿಕಾರಿಗಳು ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.



