ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಕೇಂದ್ರ ತನಿಖಾ ಸಂಸ್ಥೆ(ಸಿಬಿಐ), ಲೋಕಪಾಲಗೆ ತನ್ನ ವರದಿ ಸಲ್ಲಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಲೋಕಪಾಲದ ಉಲ್ಲೇಖದ ಮೇರೆಗೆ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಕಳೆದ ವರ್ಷ ಮಾರ್ಚ್ 21 ರಂದು ಮಹುವಾ ಮೊಯಿತ್ರಾ ಮತ್ತು ಉದ್ಯಮಿ ದರ್ಶನ್ ಹಿರಾನಂದಾನಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.ಪ್ರಕರಣದ ತನಿಖೆ ನಡೆಸಿದ ಸಿಬಿಐ ತನ್ನ ವರದಿಯನ್ನು ಲೋಕಪಾಲಗೆ ಸಲ್ಲಿಸಿದೆ. ಲೋಕಪಾಲ ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹುವಾ ಮೊಯಿತ್ರಾ ಅವರು ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಲೋಕಪಾಲರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಲೋಕಪಾಲ, ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ನಿರ್ದೇಶನ ನೀಡಿತ್ತು.