ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಹಾಡಹಗಲೇ ಹತ್ಯೆ ಮಾಡಲು ಸಂಚು ರೂಪಿಸಿದ್ದ ಬಿಹಾರ ಮೂಲದ ಯುವಕನನ್ನು ನೆಲಮಂಗಲ ಗ್ರಾಮಾಂತರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.
ಬಂಧಿತನನ್ನು ಬಿಹಾರ ಮೂಲದ ಶುಭಂ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿದ್ದ ಈತ, ಕಳೆದ ಮೂರು ವರ್ಷಗಳಿಂದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳ ಹಿಂದೆ ಬಿದ್ದು ಪೀಡಿಸುತ್ತಿದ್ದ. ಆದರೆ ಯುವತಿ ಆತನ ಪ್ರೀತಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಳು. ಇದರಿಂದ ಕೆರಳಿದ ಶುಭಂ, ಆಕೆ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಾಳೆ ಎಂಬ ಅನುಮಾನದಿಂದ ಆಕೆಯನ್ನು ಮುಗಿಸಲು ನಿರ್ಧರಿಸಿದ್ದ.
ಕೊಲೆ ಮಾಡುವ ಉದ್ದೇಶದಿಂದಲೇ ಆನ್‌ಲೈನ್ ಮೂಲಕ ಕಂಟ್ರಿಮೇಡ್ ರಿವಾಲ್ವರ್ ತರಿಸಿಕೊಂಡಿದ್ದ ಆರೋಪಿ, ಮಲ್ಲಾಪುರ ಗ್ರಾಮದ ರಸ್ತೆಯಲ್ಲಿ ಗನ್ ಹಿಡಿದು ಓಡಾಡುತ್ತಿದ್ದ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪರೀಕ್ಷೆಯ ಹಾಲ್ ಟಿಕೆಟ್ ಪಡೆಯಲು ಯುವತಿ ಊಬರ್ ಕಾರಿನಲ್ಲಿ ಕಾಲೇಜಿಗೆ ತೆರಳುತ್ತಿದ್ದಾಗ, ತನ್ನನ್ನು ಹಿಂಬಾಲಿಸುತ್ತಿದ್ದ ಶುಭಂ ಬಗ್ಗೆ ಚಾಲಕ ಶಿವಕುಮಾರ್ ಅವರಿಗೆ ತಿಳಿಸಿದ್ದಾಳೆ. ಕೂಡಲೇ ಎಚ್ಚೆತ್ತ ಶಿವಕುಮಾರ್, 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ನೆಲಮಂಗಲ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಸುತ್ತುವರೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನಿಂದ ಒಂದು ಕಂಟ್ರಿಮೇಡ್ ರಿವಾಲ್ವರ್ ಹಾಗೂ ನಾಲ್ಕು ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಊಬರ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.


