ಕಲ್ಯಾಣ ಕರ್ನಾಟಕ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ – ಜಿಲ್ಲಾಧಿಕಾರಿ ಗೋವಿಂದರೆಡ್ಡಿ

ಹೊಸದಿಗಂತ ವರದಿ ಬೀದರ್:

ಈ ವರ್ಷ ಆಜಾದಿಕಾ ಅಮೃತ ಮಹೋತ್ಸವ ಇರುವುದರಿಂದ ಸೆಪ್ಟೆಂಬರ್.17 ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕರೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೆಪ್ಟೆಂಬರ್ 17 ರಂದು ಬೆಳಿಗ್ಗೆ 8.15ಕ್ಕೆ ಬಸವೇಶ್ವರ ವೃತ್ತದಿಂದ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಆರಂಭವಾಗಿ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಾಗುತ್ತದೆ. ಮುಂಚಿತವಾಗಿ ಬೀದರ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಧ್ವಜಾರೋಹಣ ನೆರವೇರಿಸಿ 8.15ಕ್ಕೆ ಬಸವೇಶ್ವರ ವೃತ್ತಕ್ಕೆ ಬಂದು ಸೇರಬೇಕು ಮತ್ತು ಈ ವರ್ಷ ಆಜಾದಿಕಾ ಅಮೃತ ಮಹೋತ್ಸವ ಆಗಿರುವುದರಿಂದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಬೇಕೆಂದು ಹೇಳಿದರು.

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸೆಪ್ಟೆಂಬರ್ 16 ಮತ್ತು 17 ರಂದು ಎರಡು ದಿನಗಳ ಕಾಲ ತಮ್ಮ ತಮ್ಮ ಕಚೇರಿಗಳಿಗೆ ದೀಪಾಲಂಕಾರ ಮಾಡಿಕೊಳ್ಳಬೇಕು ಮತ್ತು ಆಯಾ ಇಲಾಖೆಗಳಿಗೆ ವಹಿಸಿದ ಕೆಲಸ ಮತ್ತು ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಕಲ್ಯಾಣ ಕರ್ನಾಟಕ ದಿನಾಚರಣೆಯನ್ನು ಬೀದರ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕೆಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ ಬಾಬು, ಸಹಾಯಕ ಆಯುಕ್ತ ಮೊಹ್ಮದ ನಯೀಮ್ ಮೋಮಿನ್, ಬೀದರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಅಭಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!