ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ಸಾವಿರ ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತಿರುವ ಹಿನ್ನೆಲೆಯಲ್ಲಿ, ಹಾವೇರಿಯಲ್ಲಿ ಫೆಬ್ರವರಿ 13ರಂದು ಬೃಹತ್ ‘ಸಾಧನಾ ಸಮಾವೇಶ’ವನ್ನು ಹಮ್ಮಿಕೊಳ್ಳಲಾಗಿದೆ. ಈ ಬೃಹತ್ ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ.
ಸಮಾವೇಶ ಆಯೋಜನೆಯಾಗಲಿರುವ ನಗರದ ‘ಅಜ್ಜನ ಗುಡಿ’ ಪ್ರದೇಶಕ್ಕೆ ಭಾನುವಾರ ಸಂಜೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಸುದ್ದಿಗಾರರೊಂದಿಗೆ ಮಾತನಾಡಿದರು. “ಹಾವೇರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ನಿವಾಸಿಗಳಿಗೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಕಂದಾಯ ಗ್ರಾಮ ಹಕ್ಕುಪತ್ರಗಳನ್ನು ಅಂದು ವಿತರಿಸಲಾಗುವುದು. ಇದರೊಂದಿಗೆ ಪೋಡಿ ಮುಕ್ತ ಅಭಿಯಾನದ ಸವಲತ್ತುಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ಜನರಿಗೆ ತಲುಪಿಸಲಾಗುವುದು” ಎಂದು ಅವರು ತಿಳಿಸಿದರು.
ಚುನಾವಣಾ ಪೂರ್ವದಲ್ಲಿ ರಾಹುಲ್ ಗಾಂಧಿ ಅವರು ಜನರಿಗೆ ನೀಡಿದ್ದ ಭರವಸೆಯಂತೆ ಈಗಾಗಲೇ ವಿಜಯನಗರದಲ್ಲಿ ಮೊದಲ ಹಂತದ ಹಕ್ಕುಪತ್ರ ವಿತರಣೆ ಮಾಡಲಾಗಿದೆ. ಇದೀಗ ಹಾವೇರಿಯ ಈ ಸಮಾವೇಶದಲ್ಲಿ ಎರಡನೇ ಹಂತದ ಬೃಹತ್ ವಿತರಣಾ ಕಾರ್ಯಕ್ರಮ ನಡೆಯಲಿದೆ. “ನಾವು ಕೊಟ್ಟ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ, ಈಗ ಹಕ್ಕುಪತ್ರ ನೀಡುವ ಮೂಲಕ ಬಡವರ ಸೂರನ್ನು ಅಧಿಕೃತಗೊಳಿಸುತ್ತಿದ್ದೇವೆ” ಎಂದು ಸಚಿವರು ಹೆಮ್ಮೆಯಿಂದ ಹೇಳಿದರು.
ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಮಾತನಾಡಿದ ಸಚಿವರು, “ಹಾವೇರಿಯಲ್ಲಿ ಸುಸಜ್ಜಿತ ಮೆಡಿಕಲ್ ಕಾಲೇಜು ನಿರ್ಮಾಣವಾಗಿದೆ ಮತ್ತು ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಯೋಜನೆಗಳು ಅಂತಿಮ ಹಂತಕ್ಕೆ ಬಂದಿವೆ. ಹಾವೇರಿಯನ್ನು ರಾಜ್ಯದ ಮಾದರಿ ಜಿಲ್ಲೆಯನ್ನಾಗಿ ಮಾಡುವುದೇ ನಮ್ಮ ಗುರಿ. ಫೆಬ್ರವರಿ 13ರ ಸಮಾವೇಶವು ಜಿಲ್ಲೆಯ ಇತಿಹಾಸದಲ್ಲಿ ಸುರ್ಣಾಕ್ಷರಗಳಲ್ಲಿ ಬರೆದಿಡುವಂತಹ ಕಾರ್ಯಕ್ರಮವಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.


