November 15, 2026
Sunday, November 15, 2026
spot_img

ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ಕೇಂದ್ರ ಸರ್ಕಾರ ಬದ್ಧ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಜೊತೆಗೆ ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಬೆಳೆಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ‌ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರಂನ ಬೀಗಲ್ಸ್ ಬಾಸ್ಕೆಟ್‌ಬಾಲ್ ಕ್ಲಬ್‌ನಲ್ಲಿ ಭಾನುವಾರ ನಡೆದ ಬೆಂಗಳೂರು ಉತ್ತರ ಸಂಸದ್ ಕ್ರೀಡಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

2036ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸುವ ನಿಟ್ಟಿನಲ್ಲಿ ಭಾರತ ಸಿದ್ಧತೆ ನಡೆಸುತ್ತಿದೆ. ದೇಶಾದ್ಯಂತ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ, ಆಟಗಾರರಿಗೆ ತರಬೇತಿ ಹಾಗೂ ತರಬೇತುದಾರರ ನೇಮಕ ಸೇರಿದಂತೆ ಹಲವು ಕಾರ್ಯಗಳು ನಡೆಯುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಸಂಸದ್ ಕ್ರೀಡಾ ಮಹೋತ್ಸವ ಆಯೋಜಿಸಲಾಗುತ್ತಿದ್ದು, ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ ಇದರಲ್ಲಿ ಭಾಗವಹಿಸಿ ಪ್ರೋತ್ಸಾಹ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜನಪದ ಸಮರ ಕಲೆಗಳ ಕೇಂದ್ರದ ನಿರ್ದೇಶಕ ಹಾಗೂ ಪದ್ಮಶ್ರೀ ಪುರಸ್ಕೃತ ಡಾ. ಹಾಸನ ರಘು ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಿಗೆ ಸ್ಫೂರ್ತಿಯ ಮೂಲವಾಗಿದೆ. ಆಧುನಿಕ ಕ್ರೀಡೆಗಳ ಜೊತೆಗೆ ಗ್ರಾಮೀಣ ಕ್ರೀಡೆಗಳಿಗೂ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ನಮ್ಮ ಸಾಂಪ್ರದಾಯಿಕ ಕ್ರೀಡೆಗಳನ್ನು ಉಳಿಸಿ ಬೆಳೆಸುವುದು ಅಗತ್ಯ ಎಂದರು.

ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಹಾಗೂ ಅರ್ಜುನ ಪ್ರಶಸ್ತಿ ಪುರಸ್ಕೃತೆ ಮಮತಾ ಪೂಜಾರಿ ಮಾತನಾಡಿ, ಕ್ರೀಡೆಯಲ್ಲಿ ಸಾಧನೆ ಮಾಡಲು ಬದ್ಧತೆ ಮತ್ತು ನಿರಂತರ ಪರಿಶ್ರಮ ಮುಖ್ಯ. ಮುಂಬರುವ ಕಾಮನ್‌ವೆಲ್ತ್ ಹಾಗೂ ಒಲಿಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತರಬೇಕು ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ತ್ರೋಬಾಲ್ ಫೆಡರೇಶನ್ ಪ್ರಧಾನ ಕಾರ್ಯದರ್ಶಿ ಡಾ. ಟಿ. ರಾಮಣ್ಣ, ಏಷ್ಯನ್ ಪ್ಯಾರಾ ಗೇಮ್ಸ್ ಚಿನ್ನದ ಪದಕ ವಿಜೇತ ಸೌಮ್ಯ ಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಕ್ರೀಡಾ ಸಾಧಕರನ್ನು ಸನ್ಮಾನಿಸುವುದರ ಜೊತೆಗೆ ಕ್ರೀಡಾಪಟುಗಳಿಂದ ಟೇಕ್ವಾಂಡೋ ಪ್ರದರ್ಶನ ಮತ್ತು ಪಥಸಂಚಲನ ನಡೆಯಿತು.

ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಇಂತಹ ಕ್ರೀಡಾ ಮಹೋತ್ಸವಗಳು ಭವಿಷ್ಯದ ಕ್ರೀಡಾ ಸಾಧಕರನ್ನು ರೂಪಿಸುವುದರ ಜೊತೆಗೆ, ಒಲಿಂಪಿಕ್ಸ್‌ನಂತಹ ಜಾಗತಿಕ ವೇದಿಕೆಗಳಲ್ಲಿ ಭಾರತ ಮತ್ತಷ್ಟು ಯಶಸ್ಸು ಸಾಧಿಸಲು ಪ್ರೇರಣೆಯಾಗಲಿವೆ.

Must Read

Skip to toolbar