ರಾಯಚೂರು ವಿಮಾನ ನಿಲ್ದಾಣಕ್ಕೆ ಕೇಂದ್ರ ಸರ್ಕಾರದ ಗ್ರೀನ್‌ ಸಿಗ್ನಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಹು ದಿನಗಳಿಂದ ನನೆಗುದಿಗೆ ಬಿದ್ದಿದ್ದ ರಾಯಚೂರು ವಿಮಾನ ನಿಲ್ದಾಣಕ್ಕೆ ಕೊನೆಗೂ ಕೇಂದ್ರ ಸರ್ಕಾರದ ಗ್ರೀನ್‌ ಸಿಗ್ನಲ್‌ ದೊರೆತಿದೆ. ಕೇಂದ್ರ ವಿಮಾನಯಾನ ಸಚಿವರ ಜೊತೆ ಹಲವು ಬಾರಿ ನಡೆಸಿದ ಚರ್ಚೆಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ತಿಳಿಸಿದ್ದಾರೆ.

ಕೇಂದ್ರದಿಂದ ವಿಮಾನ ನಿಲ್ದಾಣಕ್ಕೆ ಗ್ರೀನ್‌ ಸಿಗ್ನಲ್‌ ದೊರೆತಿರುವ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, ನಮ್ಮ ಕಾಂಗ್ರೆಸ್‌ ಸರ್ಕಾರ ರಾಯಚೂರಿನಲ್ಲಿ ನೂತನ ಗ್ರೀನ್‌ ಫೀಲ್ಡ್‌ ಏರ್‌ಪೋರ್ಟ್‌ ಮಾಡಲು ಬಹಳ ಪ್ರಯತ್ನ ಮಾಡಿತ್ತು. ಅಲ್ಲದೇ, ಆಯವ್ಯಯದಲ್ಲೂ ಈ ಬಗ್ಗೆ ಪ್ರಸ್ತಾಪಿಸಲಾಗಿತ್ತು.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ವಿಶೇಷ ಕಾಳಜಿ ವಹಿಸಿ ಕೇಂದ್ರ ಸರ್ಕಾರದೊಂದಿಗೆ ಸಮನ್ವಯ ಮಾಡಿದ್ದರು. ರಾಯಚೂರು ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲ ಸಹಕಾರವನ್ನು ಸರ್ಕಾರ ನೀಡುವುದಾಗಿಯೂ ಭರವಸೆ ನೀಡಿದ್ದರು. ಇದರ ಬೆನ್ನಲ್ಲೇ, ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ದಿ ನಿಗಮದ ವತಿಯಿಂದ ಅಗತ್ಯ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದರ ಬಗ್ಗೆ ಕೈಗಾರಿಕೆ ಮತ್ತು ಮೂಲ ಸೌಕರ್ಯ ಸಚಿವ ಎಂ.ಬಿ ಪಾಟೀಲ್​ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ಅವರು ಕೂಡಾ ವಿಶೇಷ ಒತ್ತು ನೀಡಿದ್ದರು.

ರಾಯಚೂರು ಸಂಸದ ಜಿ ಕುಮಾರ ನಾಯ್ಕ್‌ ನೇತೃತ್ವದ ತಂಡ ಇತ್ತೀಚಿಗೆ ಕೇಂದ್ರ ವಿಮಾನಯಾನ ಸಚಿವ ರಾಮ್‌ ಮೋಹನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ವಿಮಾನಯಾನ ಸಚಿವರು, ಅಗತ್ಯ ಅನುಮತಿಯನ್ನು ನೀಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!