ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಪ್ರತಿಯೊಬ್ಬ ಅರ್ಹ ನಾಗರಿಕನೂ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ಹುಬ್ಬಳ್ಳಿಯ ತಮ್ಮ ನಿವಾಸದಲ್ಲೇ ಭಾಗವಹಿಸಿದ್ದಾರೆ.
ಸಚಿವರ ನಿವಾಸಕ್ಕೆ ಭೇಟಿ ನೀಡಿದ ಬೂತ್ ಮಟ್ಟದ ಅಧಿಕಾರಿಗಳು (BLOs), ಅವರ ಕುಟುಂಬದ ವಿವರ ಹಾಗೂ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿದರು. ಈ ವೇಳೆ ಮಾತನಾಡಿದ ಜೋಶಿ, ಅರ್ಹ ಮತದಾರರನ್ನು ಗುರುತಿಸಲು ಹಾಗೂ ಮೃತಪಟ್ಟ ಅಥವಾ ಬೇರೆಡೆಗೆ ವಲಸೆ ಹೋದವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಈ ಎಸ್‌ಐಆರ್ ಪ್ರಕ್ರಿಯೆ ಮುಖ್ಯವಾಗಿದೆ. ಸಾರ್ವಜನಿಕರು ಯಾವುದೇ ಗೊಂದಲವಿಲ್ಲದೆ ಇದರಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ನಿಯಮ ಉಲ್ಲಂಘನೆ ಬಗ್ಗೆ ಜೋಶಿ ಆಕ್ಷೇಪ
ಮತದಾರರ ಪಟ್ಟಿ ಪರಿಷ್ಕರಣೆಯ ಮಹತ್ವವನ್ನು ಸಾರುತ್ತಲೇ, ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಪ್ರಕ್ರಿಯೆಯ ದೋಷಗಳ ಬಗ್ಗೆ ಕೇಂದ್ರ ಸಚಿವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ:
ಹುಬ್ಬಳ್ಳಿ-ಧಾರವಾಡ ಮತ್ತು ರಾಮನಗರ ಭಾಗಗಳಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ, ನಿಯಮಬಾಹಿರವಾಗಿ ಫಾರ್ಮ್‌ಗಳನ್ನು ಬೃಹತ್ ಪ್ರಮಾಣದಲ್ಲಿ ವಿತರಿಸಲಾಗುತ್ತಿದೆ ಎಂದು ಜೋಶಿ ಗಂಭೀರ ಆರೋಪ ಮಾಡಿದರು. ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ ಲಾಭಕ್ಕಾಗಿ ಸಾಂವಿಧಾನಿಕ ಪ್ರಕ್ರಿಯೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಡಿಯೋ ಸಾಕ್ಷ್ಯಗಳನ್ನು ಹಂಚಿಕೊಳ್ಳುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.



