ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರಿನಲ್ಲಿ ಅತಿ ಹೆಚ್ಚು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ಜನರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನ್ ಡಿ ಆರ್ ಎಫ್ ನಿಧಿಯಡಿ ರಾಜ್ಯಕ್ಕೆ 384 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಬಾಧಿತ ರೈತರು ಹಾಗೂ ಜನರಿಗೆ ನೀಡಬೇಕು. ಈ ವಿಷಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ತಕ್ಷಣವೇ ಅನುದಾನ ಬಿಡುಗಡೆ ಮಾಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಪ್ರವಾಹ ಪೀಡಿತ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷಗಳನ್ನು ಜೊತೆಯಲ್ಲಿಟ್ಟುಕೊಂಡು ಕೇಂದ್ರದ ಬಳಿಕ ಸರ್ವಪಕ್ಷ ನಿಯೋಗ ಕೊಂಡೊಯ್ಯಲು ವಿಫಲರಾಗಿದ್ದಾರೆ. ಜೊತೆಗೆ, ಸರಕು ಸೇವಾ ತೆರಿಗೆ ಮಂಡಳಿಯ ಒಂದೇ ಒಂದು ಸಭೆಯಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು ರಾಜ್ಯದ ಬೇಡಿಕೆ ಮುಂದಿಟ್ಟಿಲ್ಲ. ಕಾಂಗ್ರೆಸ್ ನ 9 ಸಂಸದರೂ ಕೂಡ ರಾಜ್ಯದ ಬೇಡಿಕೆಗಳ ಕುರಿತು ಕೇಂದ್ರಕ್ಕೆ ಮನವಿ ಮಾಡಿಲ್ಲ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಮಾಡಿರುವ ಸಾಲದ ಕುರಿತು ಶ್ವೇತಪತ್ರ ಬಿಡುಗಡೆ ಮಾಡಬೇಕು ಎಂದು ಹೇಳಿದ ಅವರು, ಸರ್ಕಾರ ಸರಿಸುಮಾರು 2 ಲಕ್ಷ ಕೋಟಿಗೂ ಹೆಚ್ಚು ಸಾಲ ಮಾಡಿದೆ ಎಂದು ತಿಳಿಸಿದರು. ಗುತ್ತಿಗೆದಾರರಿಗೆ ಬಾಕಿ ಪಾವತಿ ಮಾಡಲು ರಾಜ್ಯ ಸರ್ಕಾರ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಗುತ್ತಿಗೆದಾರರು ಲೋಕಸಭೆವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯುವ ಜೊತೆಗೆ, ಜನವರಿಯಿಂದ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ ಎಂದು ಹೇಳಿದರು.
ಮುಂಗಾರಿನಲ್ಲಿ ಹಾನಿಗೊಳಗಾದ ರೈತರಿಗೆ ಪರಿಹಾರವಾಗಿ ಕೇಂದ್ರದಿಂದ ರಾಜ್ಯಕ್ಕೆ 384 ಕೋಟಿ ಬಿಡುಗಡೆ: ಆರ್. ಅಶೋಕ
