November 22, 2026
Sunday, November 22, 2026
spot_img

ಕಾಕತಿಯಲ್ಲಿ ಹಾಡಹಗಲೇ ಚೈನ್ ಸ್ನ್ಯಾಚಿಂಗ್: ಮಹಿಳೆಯ ಚಿನ್ನದ ಸರ ಎಗರಿಸಿ ಬೈಕ್‌ನಲ್ಲಿ ಪರಾರಿಯಾದ ಖದೀಮರು

ಹೊಸದಿಗಂತ ವರದಿ ಬೆಳಗಾವಿ:

ಬೆಳಗಾವಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ, ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ಹಾಡಹಗಲೇ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೃತ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ತರಕಾರಿ ಖರೀದಿಗೆಂದು ಕಾಕತಿ ಗ್ರಾಮಕ್ಕೆ ಬಂದಿದ್ದ ಮಹಿಳೆಯನ್ನು ಗುರಿಯಾಗಿಸಿಕೊಂಡ ಇಬ್ಬರು ದುಷ್ಕರ್ಮಿಗಳು ಆಕೆಯ ಚಲನವಲನ ಗಮನಿಸಿ ಹಿಂಬಾಲಿಸಿದ್ದಾರೆ ಎನ್ನಲಾಗಿದೆ. ಬಳಿಕ ಸೂಕ್ತ ಸಮಯ ಸಾಧಿಸಿ, ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.

ಜನರ ಓಡಾಟವಿರುವ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲೇ ಈ ಕೃತ್ಯ ನಡೆದಿರುವುದು ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಚೈನ್ ಸ್ನ್ಯಾಚಿಂಗ್ ನಡೆಸುತ್ತಿರುವ ಪ್ರಕರಣಗಳು ಎಚ್ಚರಿಕೆ ಮೂಡಿಸಿದ್ದು, ಚಿನ್ನಾಭರಣ ಧರಿಸಿ ಸಂಚರಿಸುವಾಗ ಜಾಗರೂಕತೆ ವಹಿಸುವಂತೆ ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಸರ ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗುತ್ತಿರುವ ದುಷ್ಕರ್ಮಿಗಳ ದೃಶ್ಯ ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ದೃಶ್ಯಾವಳಿಗಳು ಆರೋಪಿಗಳ ಪತ್ತೆಗೆ ಪೊಲೀಸರಿಗೆ ಪ್ರಮುಖ ಸುಳಿವು ನೀಡುವ ಸಾಧ್ಯತೆಯಿದೆ.

ಘಟನೆ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿರುವ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ. ಹಾಡಹಗಲೇ ನಡೆದ ಚೈನ್ ಸ್ನ್ಯಾಚಿಂಗ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Must Read

Skip to toolbar