ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ 24 ರೋಗಿಗಳು ಸಾವನ್ನಪ್ಪಿದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ರಚಿಸಿ ಆದೇಶಿಸಿದೆ.
ಕೋವಿಡ್ ಸೋಂಕು ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮುಖ್ಯಸ್ಥರಾಗಿರುವ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಎ.ಎನ್ ವೇಣುಗೋಪಾಲಗೌಡ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಈ ಸಮಿತಿ ಸೀಜ್ ಆಗಿರುವ ದಾಖಲೆಗಳನ್ನು ಪರಿಶೀಲಿಸಿ, ಸತ್ಯಶೋಧನೆ ನಡೆಸಿ ಮೇ 10ರೊಳಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ಸೂಚಿಸಿದೆ.
ಈ ಸಮಿತಿಗೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಬೇಕು. ರಾಜ್ಯದಲ್ಲಿ ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು. ಈ ನಿಟ್ಟಿನಲ್ಲಿ ಸಮಿತಿ ಸತ್ಯಶೋಧನೆ ನಡೆಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.
ಸರ್ಕಾರ ಪ್ರಕರಣವನ್ನು ತನಿಖೆ ಮಾಡಲು ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಅವರ ಸಮಿತಿ ನೇಮಕ ಮಾಡಿರುವುದಾಗಿ ಹೈಕೋರ್ಟ್ಗೆ ತಿಳಿಸಿದ್ದು, ಸಮಿತಿ ಮುಂದಿನ ಒಂದು ತಿಂಗಳಲ್ಲಿ ವಿಚಾರಣೆ ನಡೆಸಿ ವರದಿ ಸಲ್ಲಿಸಲಿದೆ ಎಂದು ಸ್ಪಷ್ಟಪಡಿಸಿದೆ.