ಹೊಸದಿಗಂತ ವರದಿ,ಮದ್ದೂರು :
ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ನನ್ನ ಸ್ಪರ್ಧೆ ಇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದರು.
ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ನಡೆದ ತಮ್ಮ ಸಹಪಾಠಿ ಪುಟ್ಟಿನಕೆರೆ ಸತ್ಯನಾರಾಯಣಪುತ್ರಿಯ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದರು.
ಈಗಾಗಲೇ ನನಗೆ ನಾಲ್ಕೈದು ಕ್ಷೇತ್ರಗಳಿಂದ ವಿಧಾನ ಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನ ಬಂದಿದೆ. ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲಘಿ. ಅಂದಿನ ರಾಜಕೀಯ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳುತ್ತೇನೆಯೇ ಹೊರತು, ಮೈಸೂರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅವಧಿಗೆ ಮುನ್ನ ವಿಧಾನ ಸಭಾ ಚುನಾವಣೆ ಬರುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ‌್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವಧಿಗೆ ಮುನ್ನ ಚುನಾವಣೆ ನಡೆಯುವ ಸಾಧ್ಯತೆಗಳಿಲ್ಲಘಿ. 2023ರ ಏಪ್ರಿಲ್‌ನಲ್ಲಿ ಚುನಾವಣೆ ನಡೆಯುತ್ತದೆ. ಅವಧಿ ಮುನ್ನ ಚುನಾವಣೆ ಕೇವಲ ಊಹಾಪೋಹ ಎಂದು ಹೇಳಿದರು.