ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ಅಭ್ಯರ್ಥಿ ವಿಚಾರವಾಗಿ ನಮ್ಮಲ್ಲಿ ಯಾವ ಒಡಕಿಲ್ಲ. ಸಿ.ಪಿ. ಯೋಗೇಶ್ವರ್ ಅಭ್ಯರ್ಥಿ ಆಗಬಹುದು, ಜೆಡಿಎಸ್ ನವರೇ ನಿಲ್ಲಬಹುದು. ನಮ್ಮಲ್ಲಿ ಯಾವುದೇ ಒಡಕಿಲ್ಲ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಯಾರು ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಈ ಕುರಿತಾಗಿ ಕುಮಾರಸ್ವಾಮಿ ಅವರೇ ಮಾಹಿತಿ ನೀಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರವನ್ನು ಬಿಟ್ಟು ಕೊಡುವುದಕ್ಕೆ ನನಗೆ ಮನಸ್ಸಿಲ್ಲ. ಮೂರು ಬಾರಿ ನನಗೆ ಶಸ್ತ್ರಚಿಕಿತ್ಸೆ ಆಗಿದೆ. ಅದರ ನಡುವೆಯೂ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಿದ್ದೇನೆ. ಚನ್ನಪಟ್ಟಣವನ್ನು ನಾನು ಬದುಕಿರುವವರೆಗೂ ಮರೆಯುವುದಿಲ್ಲ. ಈಗಾಗಲೇ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕೇಂದ್ರ ಮಂತ್ರಿ ಆಗಿ ಕೆಲಸ ಮಾಡುತ್ತಿದ್ದೇನೆ. ಚನ್ನಪಟ್ಟಣ ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.