ದಾವೋಸ್ ನಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ: ಮೆ: ಲುಲು ಗ್ರೂಪ್ ಜೊತೆ ಒಪ್ಪಂದಕ್ಕೆ ಸಹಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮೆ: ಲುಲು ಗ್ರೂಪ್ ಇಂಟರ್ ನ್ಯಾಷನಲ್ ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು.

ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಾವೋಸ್​ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಹಾಗೂ ಸೀಮನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿದರು. ಕರ್ನಾಟಕದಲ್ಲಿ ಫಾರ್ಮಾ ಮತ್ತು ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಯ ಅವಕಾಶಗಳನ್ನು ಅನ್ವೇಷಿಸುವಂತೆ ತಿಳಿಸಿದ ಸಿಎಂ, ಧಾರವಾಡದಲ್ಲಿ ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್​​ನ್ನು ಸಹ ಪರಿಗಣಿಸಬಹುದಾಗಿದೆ ಎಂದರು.

ಇದೇ ವೇಳೆ ಜ್ಯೂಬಿಲಿಯಂಟ್ ಫುಡ್ ವರ್ಕ್ಸ್ ನೂತನ ಕೇಂದ್ರೀಕೃತ ಪಾಕಶಾಲೆ ಪ್ರಾರಂಭಿಸಲು ಹಾಗೂ ಜ್ಯೂಬಿಲಿಯಂಟ್ ಬಯೋಸಿಸ್ ರಾಜ್ಯ ದೇವನಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ನೂತನವಾಗಿ ಆರ್ ಅಂಡ್ ಡಿ ಸೆಂಟರ್ ಸ್ಥಾಪಿಸಲು ತೀರ್ಮಾನಿಸಿದೆ.

ಹಿಟಾಚಿ ಎನರ್ಜಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ನಡೆದ ಮಾತುಕತೆಯ ಸಂದರ್ಭದಲ್ಲಿ ಇ ವಿ ಚಾರ್ಜಿಂಗ್​ಗಾಗಿ ಮೂಲಸೌಕರ್ಯ ಘಟಕ ಸ್ಥಾಪನೆಗೆ ಯೋಜಿಸುತ್ತಿರುವುದಾಗಿ ತಿಳಿಸಿದೆ. ಬೆಂಗಳೂರಿನಲ್ಲಿ ಪ್ರತಿಭೆಯ ಲಭ್ಯತೆ ಇರುವುದರಿಂದ ನವೀಕರಿಸಬಹುದಾದ ಇಂಧನ ಮತ್ತು ಡಿಜಿಟಲೀಕರಣದ ಅವಕಾಶಗಳ ಬಗ್ಗೆ ಆಸಕ್ತಿ ತೋರಿದೆ. ದೊಡ್ಡಬಳ್ಳಾಪುರದಲ್ಲಿ ಇಂಧನ ಗುಣಮಟ್ಟ ಉಪಕರಣ ಘಟಕ ಉದ್ಘಾಟಿಸುತ್ತಿದ್ದಾರೆ. 2 ಸಾವಿರ ಇಂಜಿನಿಯರ್​ಗಳನ್ನು ಹೊಂದಿರುವ ಇಂಜಿನಿಯರಿಂಗ್ ಕೇಂದ್ರವನ್ನು ನಿರ್ಮಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ 2 ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳಲಿದೆ. ಮ್ಯಾಗ್ನೆಟಿಕ್ ಇಮೇಜಿಂಗ್ ಮತ್ತು ಡಯಾಜ್ಞಾಸ್ಟಿಕ್ಸ್ ಮೇಲೆ ಕೇಂದ್ರೀಕೃತವಾದ ಆರ್​ ಅಂಡ್​​ ಡಿ ಆರೋಗ್ಯ ಯೋಜನೆ, ಸ್ಥಳೀಯ ಮಾರುಕಟ್ಟೆಗಳಿಗೆ ಮಾರಾಟ ಮಾಡಲು ವೈದ್ಯಕೀಯ ಸಲಕರಣೆಗಳನ್ನು ಉತ್ಪಾದಿಸುವ ಘಟಕವನ್ನು ಬೊಮ್ಮಸಂದ್ರದಲ್ಲಿ ಸ್ಥಾಪಿಸಲು ಸೆಪ್ಟೆಂಬರ್ 2022 ರಲ್ಲಿ ಶಂಕುಸ್ಥಾಪನೆಗೆ ಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಸೀಮನ್ಸ್ ಸಂಸ್ಥೆ 2500 ಇಂಜಿನಿಯರ್​ಗಳನ್ನು ಹೊಂದಿದೆ. ಆಧುನಿಕ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಸಂಬಂಧಿಸಿದಂತೆ ವಿಶೇಷ ಪ್ರೋತ್ಸಾಹಕಗಳನ್ನು ಕರ್ನಾಟಕ ಸರ್ಕಾರ ಒದಗಿಸುವ ಭರವಸೆ ನೀಡಿದೆ.

ಜಗ್ಗಿ ವಾಸುದೇವ್ ಭೇಟಿ ಮಾಡಿದ ಸಿಎಂ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ವಿಟ್ಜರ್ಲೆಂಡಿನ ದಾವೋಸ್​ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಹವಾಮಾನ ಬದಲಾವಣೆ ಮತ್ತು ಪರಿಸರ ಮಾಲಿನ್ಯ ಕುರಿತ ಗೋಷ್ಠಿಗೂ ಮುನ್ನ ಇಶಾ ಫೌಂಡೇಶನ್ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಅವರನ್ನು ಭೇಟಿಯಾದರು. ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಜೊತೆಗಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!