ಹೊಸದಿಗಂತ ನಂದಗಡ (ಬೆಳಗಾವಿ):
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಖಾನಾಪುರ ತಾಲ್ಲೂಕಿನ ಪುಣ್ಯಭೂಮಿ ನಂದಗಡ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ರಾಯಣ್ಣನನ್ನು ಬ್ರಿಟಿಷರು ಗಲ್ಲಿಗೇರಿಸಿದ ಈ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಲ್ಲಿ ನೂತನವಾಗಿ ನಿರ್ಮಿಸಲಾದ ‘ರಾಯಣ್ಣ ವಸ್ತುಸಂಗ್ರಹಾಲಯ’ ಮತ್ತು ಭವ್ಯ ರಾಯಣ್ಣ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ವೀರಭೂಮಿಗೆ ಆಗಮಿಸುತ್ತಿದ್ದಂತೆ ರಾಯಣ್ಣನ ಅಭಿಮಾನಿಗಳು ಭಂಡಾರವನ್ನು ಹಣೆಗೆ ಹಚ್ಚುವ ಮೂಲಕ ತಮ್ಮ ನೆಚ್ಚಿನ ನಾಯಕನನ್ನು ಅದ್ಧೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಯಣ್ಣನ ಬಲಿದಾನವನ್ನು ಸ್ಮರಿಸಿ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಈ ಸಮಾರಂಭ ಜರುಗಿತು. ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಿವರಾಜ್ ತಂಗಡಗಿ, ಬೈರತಿ ಸುರೇಶ್ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ ಸೇರಿದಂತೆ ಜಿಲ್ಲೆಯ ಶಾಸಕರು ಮತ್ತು ಸಾವಿರಾರು ರಾಯಣ್ಣ ಅಭಿಮಾನಿಗಳು ಪಾಲ್ಗೊಂಡಿದ್ದರು.


