ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಭಟನೆಗೆ ಸಂಬಂಧಿಸಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಲು ನಿರಾಕರಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.
2020ರ ಪ್ರಕರಣ ಇದಾಗಿದ್ದು, ಸಾರ್ವಜನಿಕ ಕಾಮಗಾರಿಯಲ್ಲಿ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರೋರ್ವರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಅಂದಿನ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿತ್ತು.
ಈ ಸಂಬಂಧ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಸಿದ್ದರಾಮಯ್ಯ, ಸಚಿವರಾದ ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿಯೂ ಆಗಿರುವ ರಣದೀಪ್ ಸುರ್ಜೆವಾಲಾ ಅವರಿಗೆ ತಲಾ 10 ಸಾವಿರ ರೂ. ದಂಡ ವಿಧಿಸಿ, ವಿಚಾರಣೆಗೆ ಹಾಜರಾಗುವಂತೆ ಫೆ.6ರಂದು ತೀರ್ಪು ನೀಡಿತ್ತು.
ಸಿದ್ದರಾಮಯ್ಯ ಪರ ವಕೀಲರು ಈ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಇದು ಇಂದು ವಿಚಾರಣೆಗೆ ಬರಲಿದೆ.