Sunday, January 11, 2026

ನಿಯಂತ್ರಣ ತಪ್ಪಿ ಚಿಗರಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಸವಾರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹುಬ್ಬಳ್ಳಿಯ ಉಣಕಲ್ ಬಿಆರ್‌ಟಿಎಸ್ ಕಾರಿಡಾರ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ವೇಗವಾಗಿ ಬಂದ ಕಾರು ಮತ್ತು ಚಿಗರಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಗಿರೀಶ ಬಣವಿ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಗಿರೀಶ ಅವರು ತಮ್ಮ ಕಾರಿನಲ್ಲಿ ಧಾರವಾಡದಿಂದ ಹುಬ್ಬಳ್ಳಿ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಉಣಕಲ್ ಸಮೀಪದ ಬಿಆರ್‌ಟಿಎಸ್ ಪಥದಲ್ಲಿ ಎದುರಿನಿಂದ ಬಂದ ಚಿಗರಿ ಬಸ್ಸಿಗೆ ಕಾರು ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಿರೀಶ ಅವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅಪಘಾತದ ಭೀಕರತೆ ಎಷ್ಟು ತೀವ್ರವಾಗಿತ್ತೆಂದರೆ, ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರಿನ ಡ್ಯಾಶ್‌ಕ್ಯಾಮ್‌ನಲ್ಲಿ ಈ ದೃಶ್ಯ ಸಂಪೂರ್ಣವಾಗಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದು, ವಾಹನ ಸವಾರರ ಎದೆ ಝಲ್ಲೆನಿಸುವಂತಿದೆ. ಬಿಆರ್‌ಟಿಎಸ್ ಪಥದಲ್ಲಿ ನಿಯಮ ಮೀರಿ ಸಂಚರಿಸಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ.

ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!