ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲ್ಲ: ಸಿಎಂ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರಕ್ಕೆ ಸೆಡ್ಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ತಮ್ಮ ಸರ್ಕಾರ ಕೇರಳದಲ್ಲಿ ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರತಿಪಾದಿಸಿದ್ದಾರೆ.
ತಮ್ಮ ಎಲ್‌ಡಿಎಫ್ ಸರ್ಕಾರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, “ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಕುರಿತು ಕೇರಳ ಸರ್ಕಾರವು ಸ್ಪಷ್ಟ ನಿಲುವನ್ನು ಹೊಂದಿದೆ. ಅದು ಮುಂದುವರೆಯಲಿದೆʼ ಎಂದು ಹೇಳಿದ್ದಾರೆ.
ಕಳೆದ ತಿಂಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಕೋರೋನಾ ಕೊನೆಗೊಂಡ ನಂತರ ಸಿಎಎ ಕಾಯ್ದೆ ಜಾರಿಗೆ ತರುವುದಾಗಿ ಘೋಷಿಸಿದ್ದರು. ಈ ಬಗ್ಗೆ ವಾಗ್ದಾಳಿ ನಡೆಸಿರುವ ವಿಜಯನ್‌, ಕೆಲ ದಿನಗಳಿಂದ ಭಾರತದ ಜಾತ್ಯತೀತತೆಯನ್ನು ನಾಶ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಒಂದು ನಿರ್ದಿಷ್ಟ ಗುಂಪಿನ ಜನರು ಇದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದ್ದಾರೆ. ಧರ್ಮದ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸಲಾಗುತ್ತಿದೆ. ಆದರೆ ಕೇರಳದಲ್ಲಿ ಧರ್ಮದ ಆಧಾರದ ಮೇಲೆ ಯಾರಿಗೂ ಪೌರತ್ವ ನೀಡುವುದಿಲ್ಲ ರಾಜ್ಯ ಸರ್ಕಾರವು ದೃಢವಾದ ನಿಲುವನ್ನು ತೆಗೆದುಕೊಂಡಿದೆ” ಎಂದು ಸ್ಪಷ್ಟಪಡಿಸಿದರು.
ಜನರಲ್ಲಿ ಕೋಮು ಉದ್ವಿಗ್ನತೆಯನ್ನು ಸೃಷ್ಟಿಸಲು ದೇಶದ ವಿವಿಧ ಭಾಗಗಳಲ್ಲಿ ಹಲವಾರು ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದರೆ ಕೇರಳ ಸರ್ಕಾರವು ಜನಪರವಾಗಿದೆ, ಸಮಾಜದ ಅತ್ಯಂತ ಬಡ ಕುಟುಂಬಗಳನ್ನು ಗುರುತಿಸಲು ಸಮೀಕ್ಷೆ ಪೂರ್ಣಗೊಂಡಿದೆ. ಈ ಸಮೀಕ್ಷೆಯ ಭಾಗವಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಪೌರತ್ವ ತಿದ್ದುಪಡಿ ಕಾಯಿದೆ ಜಾರಿಗೊಳಿಸುವುವ ಬಗ್ಗೆ ದೇಶದಲ್ಲಿ ಪರ ವಿರೋಧ ಚರ್ಚೆ ನಡೆಯುತ್ತಿವೆ. ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರಿಗೆ ಪೌರತ್ವವನ್ನು ನೀಡುವ ಗುರಿಯನ್ನುಈ ಕಾಯ್ದೆ ಹೊಂದಿದೆ. ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಂತಹ ಮುಸ್ಲಿಂ ರಾಷ್ಟ್ರಗಳಲ್ಲಿ ಕಿರುಕುಳವನ್ನು ಎದುರಿಸಿದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ ಪೌರತ್ವವನ್ನು ನೀಡಲು ಈ ಕಾಯ್ದೆ ಅವಕಾಶ ಕಲ್ಪಿಸಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!