ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಹೊಸೂರು ರಸ್ತೆಯ ಲ್ಯಾಂಗ್ ಫರ್ಡ್ ಟೌನ್ ನಲ್ಲಿರುವ ಕಾನ್ಫಿಡೆಂಟ್ ಗ್ರೂಪ್ ಕಂಪನಿಯಲ್ಲಿ ಶೋಧ ನಡೆಸುತ್ತಿದ್ದರು. ಈ ವೇಳೆ ರಾಯ್ ಅವರು ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.
ಗುಂಡೇಟಿನ ಸದ್ದು ಕೇಳಿದ ಕೂಡಲೇ ಸಿಬ್ಬಂದಿ ಅವರ ಕೋಣೆಗೆ ಧಾವಿಸಿ ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.ಮಧ್ಯಾಹ್ನ 3 ಗಂಟೆಯಿಂದ 3:15 ರ ಸುಮಾರಿನಲ್ಲಿ ಘಟನೆ ನಡೆದಿದೆ ಎಂದು ತಿಳಿಸಿದರು.
ಮೃತದೇಹ ಎಚ್ಎಸ್ಆರ್ ಲೇಔಟ್ ನ ನಾರಾಯಣ ಆಸ್ಪತ್ರೆಯಲ್ಲಿದೆ ಎಂದು ಸಿಂಗ್ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರಿಗೆ ತಿಳಿಸಿದರು.
ಈ ಸಂಬಂಧ ಕಾನ್ಫಿಡೆಂಟ್ ಗ್ರೂಪ್‌ನ ನಿರ್ದೇಶಕರು ದೂರು ದಾಖಲಿಸಿದ್ದಾರೆ. ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದರು.
ನಮ್ಮ ಆರಂಭಿಕ ವರದಿಗಳ ಪ್ರಕಾರ, ಕಳೆದ ಮೂರು ದಿನಗಳಿಂದ ಶೋಧ ಕಾರ್ಯ ನಡೆಯುತ್ತಿದೆ. ಇಂದು ಸೇರಿದಂತೆ ಐ-ಟಿ ತಂಡ ಅವರನ್ನು ವಿಚಾರಣೆ ನಡೆಸುತ್ತಿದೆ. ಪೊಲೀಸ್ ತನಿಖೆಯಿಂದ ಮಾತ್ರ ನಿಜವಾಗಿಯೂ ಅಲ್ಲಿ ಏನಾಯಿತು ಎಂಬುದನ್ನು ಬಹಿರಂಗಪಡಿಸಲು ಸಾಧ್ಯ ಎಂದು ಸಿಂಗ್ ಹೇಳಿದರು.
ಈ ಪ್ರಕರಣವನ್ನು ಆತ್ಮಹತ್ಯೆಗೆ ಪ್ರಚೋದನೆ ಎಂದು ಪರಿಗಣಿಸಬಹುದೇ ಎಂದು ಕೇಳಿದಾಗ, ದೂರಿನ ಆಧಾರದ ಮೇಲೆ ತನಿಖೆ ಮುಂದುವರಿಯುತ್ತದೆ ಎಂದು ಅವರು ಹೇಳಿದರು.



