ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.
ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಈ ಸಭೆ ಮಾಡಿದ್ದೇವೆ ಎಂದು ಹೇಳಿದರು.
ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದರು.