ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಮೇಘಸ್ಫೋಟ ಸಂಭವಿಸಿದ್ದು, 4 ಮಂದಿ ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.
ಬುಧವಾರ ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ದುರ್ಗಮ ಪ್ರದೇಶದಲ್ಲಿರುವ ಹೊಂಝಾರ್ ಕುಗ್ರಾಮದಲ್ಲಿ ಈ ಮೇಘಸ್ಪೋಟ ಸಂಭವಿಸಿದ್ದು, ಪ್ರವಾಹದಲ್ಲಿ ಸುಮಾರು 8 ಮನೆಗಳು ಕೊಚ್ಚಿಕೊಂಡು ಹೋಗಿವೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ 4 ಮೃತದೇಹ ಪತ್ತೆಯಾಗಿದ್ದು, ಇನ್ನೂ 40ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದಲೂ ಜಮ್ಮುವಿನ ಅನೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜುಲೈ ತಿಂಗಳಿನ ಅಂತ್ಯದವರೆಗೂ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಿಶ್ತ್ವಾರದಲ್ಲಿ ನದಿ, ನಾಲೆಗಳೆಲ್ಲ ತುಂಬಿ ಹರಿಯುತ್ತಿದ್ದು, ಸುತ್ತಮುತ್ತ ವಾಸಿಸುತ್ತಿರುವ ನಿವಾಸಿಗಳು ಆದಷ್ಟು ಸುರಕ್ಷಿತ ಸ್ಥಳಗಳಿಗೆ ಹೋಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.