ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ: ಸಚಿವ ದಿನೇಶ್ ಗುಂಡೂರಾವ್

ಹೊಸದಿಗಂತ ವರದಿ, ತುಮಕೂರು:

ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ.ರಾಜ್ಯದಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಗಟ್ಟಿಯಾಗಿದ್ದಾರೆ. ಅವರ ಬಗ್ಗೆ ಅಗೌರವವಾಗಿ ಮಾತನಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ನಗರದ ಸಿರಾಗೇಟ್ ಬಳಿಯ ಶ್ರೀದೇವಿ ಮೆಡಿಕಲ್ ಕಾಲೇಜಿಗೆ ಕ್ಯಾತ್‍ಲಾಬ್ ಉದ್ಘಾಟನೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ, ವಿನಾ ಕಾರಣ ಪದೇ ಪದೇ ಆ ಬಗ್ಗೆ ಮಾತನಾಡಬಾರದು ಎಂದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ವಿಚಾರವೂ ಸಹ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ಭೇಟಿ ಮಾಡುವುದು, ಕೇಳುವುದು ತಪ್ಪೇನಲ್ಲ. ಆದರೆ ಈ ಎಲ್ಲ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನ ಕೈಗೊಳ್ಳುತ್ತದೆ. ಅದಕ್ಕೆ ನಾವೆಲ್ಲರೂ ಬದ್ಧ. ಇದೆಲ್ಲಾ ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಚಾರ ಅಲ್ಲ ಎಂದರು.

ಗೃಹ ಸಚಿವ ಡಾ. ಜಿ. ಪರಮೇಶ್ವರ್ ದೆಹಲಿಗೆ ಏಕೆ ಹೋಗಿದ್ದಾರೆ ಎಂಬ ಬಗ್ಗೆ ನಮಗೇನು ಗೊತ್ತು, ಸಚಿವರುಗಳು ದೆಹಲಿಗೆ ಹೋಗುವುದು ದೊಡ್ಡ ಸುದ್ದಿಯೇನಲ್ಲ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಬಾಣಂತಿಯರ ಸಾವುಗಳು ಆಗಿರುವುದು ಗಂಭೀರವಾದ ವಿಷಯ. ಈ ಕುರಿತು ಈಗಾಗಲೇ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ಬಾಣಂತಿಯರ ಸಾವು ಏಕೆ ಆಯ್ತು, ತಡೆಗಟ್ಟಬಹುದಾಗಿತ್ತಾ, ಲೋಪದೋಷಗಳಾಗಿದೆಯಾ ಎಲ್ಲದರ ಬಗ್ಗೆ ತನಿಖೆ ನಡೆಯುತ್ತಿದೆ. ಈ ಕುರಿತ ತನಿಖೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಸಿಬ್ಬಂದಿ, ತಜ್ಞರನ್ನು ನೇಮಕ ಮಾಡಲಾಗಿದೆ ಎಂದರು.
ಡಿಸೆಂಬರ್, ಜನವರಿ, ಫೆಬ್ರವರಿ ತಿಂಗಳಲ್ಲಿ ಬಾಣಂತಿಯರ ಸಾವಿನ ಪ್ರಮಾಣ ಇಳಿಕೆಯಾಗಿದೆ. ಈ ಬಗ್ಗೆ ನಾವು ಹೆಚ್ಚಿನ ಒತ್ತು ನೀಡಿದ್ದೇವೆ ಎಂದು ಹೇಳಿದರು.

ತುಮಕೂರು ಜಿಲ್ಲಾಸ್ಪತ್ರೆಗೆ ಹೊಸ ರೂಪ ಕೊಡುವಂತೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಈ ಸಂಬಂಧ ಈಗಾಗಲೇ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!