November 21, 2026
Saturday, November 21, 2026
spot_img

ಹೂಡಿಕೆ ಆಕರ್ಷಿಸಲು ಜಪಾನ್‌ಗೆ ತೆರಳಲಿದೆ ಸಿಎಂ ಡಿ.ಕೆ.ಶಿವಕುಮಾರ್‌ ನಿಯೋಗ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಉನ್ನತ ಮಟ್ಟದ ನಿಯೋಗವು ಮೂರು ದಿನಗಳ ಜಪಾನ್‌ ಪ್ರವಾಸ ಕೈಗೊಳ್ಳಲಿದೆ.

ನ.23ರಿಂದ 25ರವರೆಗೆ ಪ್ರವಾಸ ನಡೆಯಲಿದ್ದು, ನವೆಂಬರ್ 23 ರಂದು ನಗೋಯಾ, ನವೆಂಬರ್ 24 ರಂದು ಒಸಾಕಾ ಹಾಗೂ ನವೆಂಬರ್ 25 ರಂದು ಟೋಕಿಯೊದಲ್ಲಿ ಮುಖ್ಯಮಂತ್ರಿಗಳು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಪ್ರವಾಸವು ಎರಡು ಪ್ರಮುಖ ಆದ್ಯತೆಗಳನ್ನು ಹೊಂದಿದೆ.

ರಾಜ್ಯದಲ್ಲಿ ಜಪಾನ್ ಹೂಡಿಕೆಯನ್ನು ಮತ್ತಷ್ಟು ಬಲಪಡಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ ಉದ್ಯಮಿಗಳೊಂದಿಗೆ ಸಭೆ ನಡೆಸುವುದು ಹಾಗೂ ಜಾಗತಿಕ ಮಟ್ಟದಲ್ಲಿ ಮಾದರಿಯಾಗಿರುವ ಜಪಾನ್‌ನ ನಗರ ನಿರ್ಮಾಣ ಪದ್ಧತಿಗಳನ್ನು ಅಧ್ಯಯನ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ತಂಡದೊಂದಿಗೆ ನಗರಾಭಿವೃದ್ಧಿ ಯೋಜನೆಗಳಿಗೆ ಭೇಟಿ ನೀಡುವುದಾಗಿದೆ.

ಸಿಎಂ ಡಿಕೆಶಿ ಅವರ ಜೊತೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಅವರು ತೆರಳಲಿದ್ದಾರೆ. ಜಪಾನ್‌ ಮತ್ತು ದಕ್ಷಿಣ ಕೊರಿಯಾದಲ್ಲಿ ರಾಜ್ಯದ ಹೂಡಿಕೆ ಪ್ರಚಾರ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ಈ ನಿಯೋಗದಲ್ಲಿ ಹಿರಿಯ ಅಧಿಕಾರಿಗಳ ತಂಡ ಇರಲಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಎಂ.ಮಹೇಶ್ವರ್ ರಾವ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಕೈಗಾರಿಕಾ ಅಭಿವೃದ್ಧಿ ಆಯುಕ್ತರು ಹಾಗೂ ಇನ್ವೆಸ್ಟ್ ಕರ್ನಾಟಕ ಫೋರಂನ ಸಿಇಒ ಖುಷ್ಬೂ ಗೋಯೆಲ್ ಚೌಧರಿ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಡಾ. ರಾಜೇಂದ್ರ ಪ್ರಸಾದ್ ಮತ್ತು ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿ-1 ಯತೀಶ್ ಆರ್ ಸೇರಿದಂತೆ ಮುಖ್ಯಮಂತ್ರಿಗಳ ಕಚೇರಿ, ಜಿಬಿಎ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

Must Read