ಜನಾಕ್ರೋಶ ಯಾತ್ರೆ ಹೊರಟ ರಾಜ್ಯ ಬಿಜೆಪಿ ನಾಯಕರಿಗೆ ಕಪಾಳಮೋಕ್ಷ: ಸಿಎಂ ಸಿದ್ದರಾಮಯ್ಯ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್‌ನ ಅಬಕಾರಿ ಸುಂಕ 2 ರೂ. ಏರಿಕೆ ಮಾಡಿರುವ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಯನ್ನು ಹೆಚ್ಚಿಸಿದ್ದಾರೆ. ಈ ಮೂಲಕ ಜನಾಕ್ರೋಶ ಯಾತ್ರೆ ಎಂಬ ಪ್ರಹಸನವನ್ನು ಶುರುಮಾಡಿರುವ ರಾಜ್ಯದ ಬಿಜೆಪಿ (BJP) ನಾಯಕರಿಗೆ ಮುಟ್ಟಿ ನೋಡಿಕೊಳ್ಳುವಂತೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಹೇಳಿದರು

ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜನವಿರೋಧಿ ಆರ್ಥಿಕ ನೀತಿಯೇ ಕಾರಣ ಎಂದು ನಾವು ಹೇಳುತ್ತಲೇ ಬಂದಿದ್ದೇವೆ. ಈ ಸತ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರೇ ದೇಶದ ಜನರ ಮುಂದೆ ಒಪ್ಪಿಕೊಂಡಿದ್ದಾರೆ. ಈಗ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ತೆರಿಗೆಯನ್ನು 2 ರೂ.ಗಳಷ್ಟು ಮತ್ತು ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50 ರೂ.ಯಷ್ಟು ಏರಿಕೆ ಮಾಡಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರ ಪ್ರತಿಕ್ರಿಯೆ ಏನು ಎಂಬುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಯುತ್ತಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಒಂದೇ ಸಮನೆ ಏರಿಸುತ್ತಾ ಹೋಗಲು ಕಾರಣ ಏನು ಎಂದು ಬಿಜೆಪಿ ನಾಯಕರು ರಾಜ್ಯದ ಜನರಿಗೆ ತಿಳಿಸಬೇಕು ಎಂದು ಆಗ್ರಹಿಸಿದರು.

ಜನಾಕ್ರೋಶ ಯಾತ್ರೆ ಹೊರಟವರ ಮುಂದೆ ಈಗ ಇರುವುದು ಎರಡೇ ಎರಡು ಆಯ್ಕೆ. ಒಂದು ಅವರು ಪ್ರಧಾನ ಮಂತ್ರಿಯವರ ಮೇಲೆ ಒತ್ತಡ ಹೇರಿ ಕೇಂದ್ರ ಸರ್ಕಾರ ಹೆಚ್ಚಿಸಿರುವ ಬೆಲೆಯನ್ನು ಇಳಿಸುವಂತೆ ಮಾಡಬೇಕು. ಇಲ್ಲವೇ ಯಾತ್ರೆಯನ್ನು ಕೊನೆಗೊಳಿಸಿ ಗಂಟುಮೂಟೆ ಕಟ್ಟಿಕೊಂಡು ತಮ್ಮ ತಮ್ಮ ಮನೆಗೆ ಮರಳಬೇಕು. ಇದರ ಹೊರತಾಗಿ ಈ ಯಾತ್ರೆಯ ಪ್ರಹಸನವನ್ನು ಮುಂದುವರಿಸಿದರೆ ಜನರ ಆಕ್ರೋಶಕ್ಕೆ ತುತ್ತಾಗುವುದು ಖಂಡಿತ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!