ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ ಇಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಿದರು.
ನಗರದ ಎನ್‌ವಿ ಕಾಲೇಜು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ 10 ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ‘ಶೂನ್ಯ ವಿದ್ಯುತ್ ಬಿಲ್’ ರಸೀದಿ ನೀಡುವ ಮೂಲಕ ಸಾಂಕೇತಿಕವಾಗಿ ಯೋಜನೆಗೆ ಚಾಲನೆ ನೀಡಿದ್ದಾರೆ.
ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಅನೇಕ ಸಚಿವರು, ಶಾಸಕರು ಹಾಗೂ ಸಂಸದರು ಪಾಲ್ಗೊಂಡಿದ್ದಾರೆ.
ಏನಿದು ಗೃಹಜ್ಯೋತಿ ಯೋಜನೆ:
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿಯೊಂದು ಕುಟುಂಬಕ್ಕೆ ಇನ್ನೂರು ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಹೇಳಿತ್ತು. ಅದರ ಅನ್ವಯ ಜುಲೈ ಒಂದರಿಂದಲೇ ಈ ಯೋಜನೆಗೆ ನೊಂದಣಿ ಆರಂಭವಾಗಿತ್ತು, ಇಂದು ಈ ಯೋಜನೆಗೆ ಚಾಲನೆ ದೊರೆತಿದೆ.