ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯ ವಿರುದ್ಧ ಬಿಜೆಪಿ ನಡೆಸಿದ ಜನ ಆಕ್ರೋಶ ಯಾತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಎಚ್‌ಡಿ ಕೋಟೆಯಲ್ಲಿ ನಡೆದ 134ನೇ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಮಾತನಾಡಿದ ಅವರು, ಜನರ ಆರ್ಥಿಕ ಸಬಲೀಕರಣ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡಿದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ವಿರೋಧಿಸುತ್ತಿದೆ ಎಂದು ಕಿಡಿಕಾರಿದರು.
ಇದೇ ವೇಳೆ ಯುಪಿಎ ಸರ್ಕಾರ ಮತ್ತು ಮೋದಿ ಆಡಳಿತದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್, ಸಿಮೆಂಟ್, ಬೆಳ್ಳಿ, ಚಿನ್ನ, ಅನಿಲ ಮತ್ತು ಇತರ ಸರಕುಗಳ ಬೆಲೆಗಳನ್ನು ಹೋಲಿಕೆ ಮಾಡಿ, ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಎಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80 ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿದ್ದೇವೆ. ಈ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.